ಅರೆಕಾಡು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೋಷಣ್ ಮಾಸಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ, ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ನೋಂದಣಿ ಅಭಿಯಾನ ಹಾಗೂ ಸೀಮಂತ ಕಾರ್ಯಕ್ರಮ ನಡೆಯಿತು.
ಮಡಿಕೇರಿ : ಅರೆಕಾಡು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೋಷಣ್ ಮಾಸಾಚರಣೆ ಅಂಗವಾಗಿ ಅರಿವು ಕಾರ್ಯಕ್ರಮ, ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ನೋಂದಣಿ ಅಭಿಯಾನ ಹಾಗೂ ಸೀಮಂತ ಕಾರ್ಯಕ್ರಮ ನಡೆಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ನಿರೂಪಣಾಧಿಕಾರಿ ಪ್ರಸನ್ನ ಕುಮಾರ್ ಮಾತನಾಡಿ, ಅರ್ಹ ಫಲಾನುಭವಿಗಳು ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಸೌಲಭ್ಯ ಪಡೆಯಲು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಮಾತನಾಡಿ, ಪೌಷ್ಟಿಕಾಂಶದ ಕೊರತೆ ಮತ್ತು ರಕ್ತಹೀನತೆ ತಡೆಗಟ್ಟುವ ಉದ್ದೇಶದಿಂದ ಪೋಷಣ್ ಮಾಸಾಚರಣೆಗೆ ಮಹತ್ವ ನೀಡಲಾಗುತ್ತಿದೆ. ಮಕ್ಕಳಿಗೆ ಸ್ಥಳೀಯವಾಗಿ ದೊರೆಯುವ ಪೌಷ್ಟಿಕ ಆಹಾರ ನೀಡಬೇಕು ಹಾಗೂ ಜಂಕ್ ಫುಡ್‌ನಿಂದ ದೂರವಿಡಬೇಕು ಎಂದು ಸಲಹೆ ನೀಡಿದರು.
ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಮೇಲ್ವಿಚಾರಕ ಮೇಪಾಡಂಡ ಸವಿತಾ ಕೀರ್ತನ್ ಅವರು ಮಾತನಾಡಿ, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪ್ರತಿಯೊಂದು ಅಂಗನವಾಡಿ ಕೇಂದ್ರದಲ್ಲಿಯೂ ಕಾರ್ಯರೂಪಕ್ಕೆ ತರುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು. ಗರ್ಭಧಾರಣೆಯಿಂದ ಎರಡು ವರ್ಷದವರೆಗೆ ಇರುವ ಮೊದಲ ಒಂದು ಸಾವಿರ ದಿನಗಳ ಮಹತ್ವವನ್ನು ವಿವರಿಸಿದ ಅವರು, ಈ ಅವಧಿಯಲ್ಲಿ ತಾಯಿ ಮತ್ತು ಮಗುವಿಗೆ ಅಗತ್ಯವಿರುವ ಪೌಷ್ಟಿಕ ಆಹಾರ ನೀಡುವುದು ಅತ್ಯಂತ ಮುಖ್ಯ ಎಂದರು. ಕ್ಷಯರೋಗದ ಕುರಿತು ಮಾಹಿತಿ ನೀಡಿದ ಅವರು, ಕ್ಷಯ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕಫ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.ಸಮುದಾಯ ಆರೋಗ್ಯ ಅಧಿಕಾರಿ ಪುಷ್ಪ ವಾಡಿಗೆರೆ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಂಕ್ ಫುಡ್ ಸೇವನೆ ಹೆಚ್ಚುತ್ತಿರುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದರು.ಮರಗೋಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಅರೆಕಾಡು ಗ್ರಾಮದ ಗ್ರಾಮಸ್ಥರು ಹಾಗೂ ಫಲಾನುಭವಿಗಳು ಭಾಗವಹಿಸಿದ್ದರು. ಗರ್ಭಿಣಿಯರಿಗೆ ಸೀಮಂತ ನೆರವೇರಿಸಲಾಯಿತು. ಪುಷ್ಪ ಪ್ರಾರ್ಥಿಸಿದರು. ಹರಿಣಾಕ್ಷಿ ನಿರೂಪಿಸಿದರು. ಅನಿಲ ಅವರು ಸ್ವಾಗತಿಸಿದರು. ಸವಿತಾ ವಂದಿಸಿದರು.