ಸಾರಾಂಶ
ಕೊಳ್ಳೇಗಾಲದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಡಾ.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡದ ಶಂಕುಸ್ಥಾಪನೆಯನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ನೇರವೇರಿಸಿದರು. ನಗರಸಭಾಧ್ಯಕ್ಷೆ ರೇಖಾ, ತೋಟೇಶ್, ಬಸ್ತಿಪುರ ಶಾಂತು, ರವಿ, ರಾಘವೇಂದ್ರ ಇದ್ದರು.
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆಗೂ ಮುನ್ನ ಸಿದ್ದರಾಮಯ್ಯನವರು ಜನರಿಗೆ ನೀಡಿದ ಭರವಸೆ ಈಡೇರಿಸುವ ಮೂಲಕ ಅವರೊಬ್ಬ ಜನಪ್ರಿಯ ಸಮರ್ಥ ನಾಯಕ ಮಾತ್ರವಲ್ಲ ಅವರೊಬ್ಬ ಜನ ಮೆಚ್ಚಿನ ಮುಖ್ಯಮಂತ್ರಿ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.ಪಟ್ಟಣದಲ್ಲಿ ₹7 ಕೋಟಿ ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ನೂತನ ವಸತಿ ನಿಲಯದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಸರ್ವಧರ್ಮದ ರಾಜ್ಯದ ಜನರು ಮತ್ತು ವಿಧ್ಯಾರ್ಥಿಗಳ ಮೂಲಭೂತ ಸೌಕರ್ಯಗಳಿಗೆ ಕಾಂಗ್ರೆಸ್ ಬದ್ಧವಾಗಿದ್ದು ಸಿಎಂ ಸಿದ್ದರಾಮಯ್ಯನವರು ರಾಜ್ಯದ ಪ್ರತಿಯೊಂದು ಜನರ ಅಭಿವೃದ್ಧಿಗೆ, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ನಡೆದು ರಾಜ್ಯದ ಜನರ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ ಎಂದರು.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಸಂವಿಧಾನ ಜಾಗೃತಿ ಅಭಿಯಾನ ನಡೆಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದೇ ರೀತಿ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಉಜ್ವಲವಾಗಿರಲಿ ಎಂದು ಜನಪರ ಕಾರ್ಯಕ್ರಮಗಳು, ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚು ಆದ್ಯತೆ ನೀಡಿ ಸ್ಥಳೀಯ ಮತ್ತು ದೂರದ ಊರಿನಿಂದ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂದು ವಸತಿ ನಿಲಯಗಳ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ನೀಡಿದ್ದಾರೆ.50 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಈ ವಸತಿ ನಿಲಯಕ್ಕೆ ಈಗ ₹7 ಕೋಟಿ ಅನುದಾನ ನೀಡಿದ್ದು, ಕಟ್ಟಡವು ಸುಸಜ್ಜಿತವಾಗಿ ನಿರ್ಮಾಣವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎಪಿ ಶಂಕರ್, ಸದಸ್ಯರಾದ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ನಗರಸಭೆ ಸದಸ್ಯರಾದ ಸುಮ ಸುಬ್ಬಣ್ಣ, ಮಂಜುನಾಥ್, ಬಸತಿಪುರ ಶಾಂತರಾಜು, ರಾಘವೇಂದ್ರ, ನಾಗೇಂದ್ರ, ತಹಸೀಲ್ದಾರ್ ಬಸವರಾಜು, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ತಾಲೂಕು ಗ್ಯಾರಂಟಿಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ , ಬಸ್ತಿಪುರ ರವಿ ಇನ್ನಿತರರಿದ್ದರು.