ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗುವಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ತೃಪ್ತಿಕರ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಮಂಗಳೂರು: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗುವಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ತೃಪ್ತಿಕರ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಅವರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯಬೇಕು. ಆಸ್ಪತ್ರೆಯ ವಾರ್ಡ್‍ಗಳು, ಶೌಚಾಲಯಗಳ ನಿರ್ವಹಣೆ, ಶುದ್ಧ ಕುಡಿಯುವ ನೀರು ಹಾಗೂ ನಿರಂತರ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ತುರ್ತು ಚಿಕಿತ್ಸಾ ಘಟಕ, ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ಪ್ರಯೋಗಾಲಯಗಳಿಗೆ ಅಗತ್ಯವಿರುವ ಆಧುನಿಕ ವೈದ್ಯಕೀಯ ಉಪಕರಣಗಳ ಖರೀದಿ ಮತ್ತು ದುರಸ್ತಿ ಕಾರ್ಯಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಅಗತ್ಯ ಔಷಧಿಗಳ ದಾಸ್ತಾನು ಸದಾ ಲಭ್ಯವಿರುವಂತೆ ನೋಡಿಕೊಳ್ಳಲು ನಿರ್ದೇಶನ ನೀಡಿದರು.ಆಸ್ಪತ್ರೆಯ ಒಳಾಂಗಣ ಮತ್ತು ಹೊರಾಂಗಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿಯನ್ನು ನಿಯಮಾನುಸಾರ ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಹಾಗೂ ರೋಗಿಗಳ ಸಹಾಯಕರಿಗೆ ಕುಳಿತುಕೊಳ್ಳಲು ಮತ್ತು ವಿಶ್ರಾಂತಿ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

ಆಸ್ಪತ್ರೆಯ ಆವರಣದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.

ಆದಾಯ ಮತ್ತು ವೆಚ್ಚದ ಪರಿಶೀಲನೆ:

ಆರೋಗ್ಯ ರಕ್ಷಾ ಸಮಿತಿಯ ಹಿಂದಿನ ಸಭೆಯ ನಡಾವಳಿಗಳ ಅನುಷ್ಠಾನ ವರದಿ ಹಾಗೂ ಪ್ರಸಕ್ತ ಸಾಲಿನ ಆಯ-ವ್ಯಯ (ಬಜೆಟ್) ಮತ್ತು ವೆಚ್ಚಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ ಅಂಗೀಕಾರ ನೀಡಲಾಯಿತು.

ಐಎಂಎ ಜಾಗ ಲೀಸ್ ನವೀಕರಣ:

ವೆನ್ಲಾಕ್ ಆಸ್ಪತ್ರೆಯ 18 ಸೆಂಟ್ಸ್ ಜಾಗವನ್ನು ಭಾರತೀಯ ವೈದ್ಯಕೀಯ ಸಂಸ್ಥೆ ಮಂಗಳೂರು ಶಾಖೆಗೆ 1997ರಲ್ಲಿ 30 ವರ್ಷ ಲೀಸ್‍ಗೆ ನೀಡಲಾಗಿದ್ದು, 2027ರಲ್ಲಿ ಈ ಒಡಂಬಡಿಕೆ ಮುಕ್ತಾಯಗೊಳ್ಳುತ್ತಿದೆ. ಪ್ರಸ್ತುತ ವಾರ್ಷಿಕ 48,000 ರು. ನೆಲ ಬಾಡಿಗೆ ಪಾವತಿಸಲಾಗುತ್ತಿದೆ. ಈ ಒಡಂಬಡಿಕೆ ನವೀಕರಿಸಬೇಕಾಗಿದ್ದಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಐಎಂಎ ಪದಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ, ವೆನ್ಲಾಕ್‌ ಅಧೀಕ್ಷಕ ಡಾ.ಶಿವಪ್ರಕಾಶ್, ಲೇಡಿಘೋಷನ್ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.