ಕೊಪ್ಪಳ: ಮೇ 1 ರಂದು ಜಿಲ್ಲಾ ಕೇಂದ್ರದಲ್ಲಿ ಭಗವಾನ ಬುದ್ಧ ಜಯಂತಿ ಅದ್ಧೂರಿ ಮತ್ತು ಅರ್ಥಪೂರ್ಣ ಆಚರಿಸಲು ನಿರ್ಧರಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಗವಾನ ಬುದ್ಧ ಜಯಂತಿ ಆಚರಣೆ ಕುರಿತು ಕೊಪ್ಪಳ ಜಿಲ್ಲಾಡಳಿತ ಭವನದ ಕೆಸ್ವಾನ್-2ರ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಪ್ಪಳ ಜಿಲ್ಲಾಮಟ್ಟದ ಭಗವಾನ ಬುದ್ಧ ಜಯಂತಿ ಆಚರಣೆ ಮೇ 1ರಂದು ಆಚರಿಸಲಾಗುವುದು. ಅಂದು ಬೆಳಗ್ಗೆ 9.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶ್ರೀ ಭಗವಾನ ಬುದ್ಧರ ಕುರಿತು ವಿಶೇಷ ಉಪನ್ಯಾಸ ಹಾಗೂ ಇತರೆ ಕಾರ್ಯಕ್ರಮ ನಡೆಯಲಿವೆ ಎಂದರು.ಸಮಾರಂಭದಂದು ಸ್ಥಳದ ಸ್ವಚ್ಛತೆ,ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಜಿಲ್ಲಾ ಮಟ್ಟದ ಜಯಂತಿ ಆಚರಣೆ ಕಾರ್ಯಕ್ರಮಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜಯಂತಿಯಂದು ಜಿಲ್ಲೆಯ ಎಲ್ಲ ತಾಲೂಕು, ಕಚೇರಿ ಹಾಗೂ ಶಾಲಾ ಮತ್ತು ಕಾಲೇಜುಗಳಲ್ಲಿ ಭಗವಾನ ಬುದ್ಧ ಜಯಂತಿ ಆಚರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪ ಸೂಗಲದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಸಮಾಜದ ಮುಖಂಡ ಯಲ್ಲಪ್ಪ ಬಳಗಾನೂರ, ಸಿದ್ದರಾಮ ಹೊಸಮನಿ, ಅಜಯ ದೊಡ್ಡಮನಿ, ಪಂಪಾಪತಿ ಎಚ್.ಬಿ. ಶಿವರಾಜ ಛಲವಾದಿ, ಪರಶುರಾಮ, ಕಾಶೆಪ್ಪ ಚಲವಾದಿ, ಸತೀಶ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.