ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು ಶಾಲಾ-ಕಾಲೇಜು ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣ ಸೃಷ್ಠಿಸುವಂತೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಜಮಾಯಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ನೂರಾರು ಕಾರ್ಯಕರ್ತರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ರಾಜ್ಯದಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು, ಶಾಲಾ-ಕಾಲೇಜುಗಳು ಪ್ರಾರಂಭವಾದ ನಂತರ ವಿದ್ಯಾರ್ಥಿಗಳ ಹಾಸ್ಟೆಲ್ ಆಯ್ಕೆ ಪ್ರವೇಶಾತಿ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಪ್ರವೇಶಾತಿ ನೀಡುವಂತಾಗಬೇಕು. ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಎಂದು ಪ್ರತಿಭಟನಾನಿರತ ಎಬಿವಿಪಿ ಕಾರ್ಯಕರ್ತರು ಒತ್ತಾಯಿಸಿದರು. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಏಕರೂಪ ಶಿಕ್ಷಣ ವೇಳಾಪಟ್ಟಿಯನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಸೂಚಿಸಬೇಕು. ಬಸ್ ಪಾಸ್ ವಿತರಣೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಿದ ತಕ್ಷಣವೇ ವಿದ್ಯಾರ್ಥಿಗಳಿಗೆ ಸಿಗುವಂತಾಗಬೇಕು. ಹಾಸ್ಟೆಲ್‌ಗಳ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಬೇಕು ಹಾಗೂ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿರುವ ಹಾಸ್ಟೆಲ್‌ಗಳಿಗೆ ಸ್ವಂತ ಕಟ್ಟಡವನ್ನು ನೀಡಬೇಕು. ಎಸ್ಸಿ-ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದಿಂದ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತದೆ. ಅನುದಾನವನ್ನು ಬೇರೆ ಕಡೆ ಬಳಕೆ ಮಾಡಿರುವ ಕುರಿತು ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಆಗ್ರಹಿಸಿದರು. ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬಹಳಷ್ಟು ಬದಲಾವಣೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಮನಹರಿಸಿ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.ನಂತರ ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಧೋರಣೆಯನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಎಬಿವಿಪಿ ಕಾರ್ಯಕರ್ತರು ಮುಂದಾದರು. ಆಗ ಸ್ಥಳದಲ್ಲೇ ಇದ್ದ ಪೊಲೀಸರು ಪ್ರತಿಭಟನಾಕಾರರು ವಶಕ್ಕೆ ಪಡೆದು ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ದರು.
;Resize=(128,128))
;Resize=(128,128))