ಪ್ರತಿಭಟನೆಗೆ ಮುಂದಾದ ಎಸ್‌ಡಿಪಿಐ ಕಾರ್ಯಕರ್ತರ ಬಂಧನ

| Published : May 04 2024, 12:30 AM IST

ಸಾರಾಂಶ

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಲು, ಅಧಿಕಾರಿಗಳು ಪರವಾನಿಗೆ ನೀಡಿರಲಿಲ್ಲ.

ಕಂಪ್ಲಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಅನುಮತಿ ಇಲ್ಲದೇ ಪ್ರತಿಭಟನೆಯಲ್ಲಿ ತೊಡಗಿದ್ದ ಎಸ್‌ಡಿಪಿಐ ಕಾರ್ಯಕರ್ತರನ್ನು ಕಂಪ್ಲಿ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ.

ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ತಾಲೂಕಿನ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಅನುಮತಿ ನೀಡುವಂತೆ ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಲು, ಅಧಿಕಾರಿಗಳು ಪರವಾನಿಗೆ ನೀಡಿರಲಿಲ್ಲ.

ಆದರೂ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಲು ಕಾರ್ಯಕರ್ತರು ಮುಂದಾಗಿದ್ದರು. ಈ ವಿಚಾರ ತಿಳಿದ ಕಂಪ್ಲಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ನಡೆಸಲು ನೆರೆದಿದ್ದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಪೊಲೀಸರ ನಡೆ ಖಂಡನೆ:

ಈ ಕುರಿತು ಸಂಘಟನೆಯ ಜಿಲ್ಲಾ ಅಧ್ಯಕ್ಷ ಸಲೀಂ ಮನಿಯರ್ ಮಾತನಾಡಿ, ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು, ಕೂಡಲೇ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಎಸ್‌ಡಿಪಿಐ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕಂಪ್ಲಿಯಲ್ಲೂ ಪ್ರತಿಭಟನೆಗೆ ಅನುಮತಿ ಕೇಳಿದರೆ ಅಧಿಕಾರಿಗಳು ನೀಡಲಿಲ್ಲ. ಈ ಕುರಿತು ಶುಕ್ರವಾರ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆಗೆ ಮುಂದಾದ ನಮ್ಮ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರ ನಡೆ ಖಂಡನೀಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಜಹಿರ್ ಅಬ್ಬಾಸ್, ತಾಲೂಕು ಅಧ್ಯಕ್ಷ ಇಮ್ರಾನ್, ಪ್ರಮುಖರಾದ ರಫಿಕ್, ಆಸಿಫ್, ರಾಜ ಸೇರಿದಂತೆ ಇತರರಿದ್ದರು.