ಸಾರಾಂಶ
ಬೆಂಗಳೂರು : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಸವನಗುಡಿ ಠಾಣಾ ವ್ಯಾಪ್ತಿಯ ರಾಣೋಜಿರಾವ್ ರಸ್ತೆಯಲ್ಲಿ ಹಾಲು ಮಾರುವ ವ್ಯಕ್ತಿಯೊಬ್ಬರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜೆ.ಪಿ.ನಗರ 6ನೇ ಹಂತದ ಅಭಿಷೇಕ್ ಅಲಿಯಾಸ್ ಮಿಲ್ಕಿ(27) ಬಂಧಿತ. ಆರೋಪಿಯಿಂದ 1.50 ಲಕ್ಷ ರು. ಮೌಲ್ಯದ 1 ಆಟೋ ರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಆರೋಪಿಯು ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ವಾಹನ ಕಳ್ಳತನ ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ. ಈತನ ಬಂಧನದಿಂದ ಬಸವನಗುಡಿ, ವಿಶ್ವೇಶ್ವರಪುರ ಹಾಗೂ ಹನುಮಂತನರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 3 ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದ್ವಿಚಕ್ರ ವಾಹನ ಕಳ್ಳನ ಬಂಧನ:
ಮತ್ತೊಂದು ಪ್ರಕರಣದಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರು ಎನ್.ಆರ್.ಕಾಲೋನಿ ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್(34) ಬಂಧಿತ. ಆರೋಪಿಯಿಂದ 1.10 ಲಕ್ಷ ರು. ಮೌಲ್ಯದ 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಆರೋಪಿ ಸುಹಾಸ್ ವೃತ್ತಿಪರ ಕಳ್ಳತನಾಗಿದ್ದು, ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಈತನ ಬಂಧನದಿಂದ ಬಸವನಗುಡಿ ಮತ್ತು ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.