ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ

| Published : Jul 31 2024, 01:01 AM IST

ಸಾರಾಂಶ

ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯ ನಡೆಸಲು ಸಂಚು ರೂಪಿಸಿ ತಿರುಗಾಡಿಕೊಂಡಿರುವ ಕುರಿತು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಫಳ್ನೀರ್ ಬಳಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ನಗರದಲ್ಲಿ ಅಪರಾಧ ಕೃತ್ಯ ನಡೆಸುವ ಉದ್ದೇಶದಿಂದ ಅಕ್ರಮವಾಗಿ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾದ ಕಾಸರಗೋಡಿನ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ (40) ಹಾಗೂ ಬಾಳೆಪುಣಿ ಗ್ರಾಮದ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಮಹಮ್ಮದ್ ರಫೀಕ್ (36) ಬಂಧಿತರು.

ಇವರಿಬ್ಬರು ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳನ್ನು ಹಾಗೂ ಮಾದಕ ವಸ್ತು ಎಂಡಿಎಂಎ ಇಟ್ಟುಕೊಂಡು ಇನ್ನೋವಾ ಕಾರಿನಲ್ಲಿ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯ ನಡೆಸಲು ಸಂಚು ರೂಪಿಸಿ ತಿರುಗಾಡಿಕೊಂಡಿರುವ ಕುರಿತು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಫಳ್ನೀರ್ ಬಳಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಆರೋಪಿಗಳಿಂದ ಪಿಸ್ತೂಲ್-1, ರಿವಾಲ್ವರ್-1, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತು ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತಿನ ಆಂದಾಜು ಮೌಲ್ಯ 10 ಲಕ್ಷ ರು. ಎಂದು ಅಂದಾಜಿಸಲಾಗಿದೆ.

ಆರೋಪಿಗಳ ಪೈಕಿ ಮೊಹಮ್ಮದ್ ಹನೀಫ್ ಎಂಬಾತ ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜ್ಯುವೆಲ್ಲರಿ ಶೂಟೌಟ್ ಪ್ರಕರಣ, ಕೇರಳದ ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜಾರಿಯಲ್ಲಿದೆ.