ಕೊಡಗು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕೃತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು ವಿಶಿಷ್ಟವಾಗಿವೆ. ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಇಂದಿಗೂ ಜೀವಂತವಾಗಿದ್ದು, ಜನರ ಸ್ನೇಹಪರ ಬದುಕು ಜಿಲ್ಲೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕೃತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು ವಿಶಿಷ್ಟವಾಗಿವೆ. ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಇಂದಿಗೂ ಜೀವಂತವಾಗಿದ್ದು, ಜನರ ಸ್ನೇಹಪರ ಬದುಕು ಜಿಲ್ಲೆಯ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಜಾನಪದ ಪರಿಷತ್ತು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಲಾ ಪ್ರತಿಭೋತ್ಸವ-2026 ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ವಿದ್ಯಾರ್ಥಿಗಳು ಯಾವುದೇ ಸ್ಪರ್ಧೆಯಿಂದಲೂ ಹಿಂದೆ ಸರಿಯದೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಪ್ರತಿಭಾವಂತರನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಪ್ರೋತ್ಸಾಹಿಸುವ ಕಾರ್ಯವನ್ನು ಇಲಾಖೆಗಳು ಮಾಡುತ್ತಿವೆ ಎಂದು ತಿಳಿಸಿದರು.ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ರಾಜ್ಯಮಟ್ಟದಲ್ಲಿಯೂ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಂಸ್ಕೃತಿಯನ್ನು ಅನಾವರಣಗೊಳಿಸುತ್ತದೆ: ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಮಾತನಾಡಿ, ಕಲೆ ಮನಸ್ಸಿನ ಅಭಿವ್ಯಕ್ತಿಗೆ ರೂಪ ನೀಡುವುದರೊಂದಿಗೆ ನಮ್ಮ ಸಂಸ್ಕೃತಿಯನ್ನು ಅನಾವರಣಗೊಳಿಸುತ್ತದೆ. ಮನುಷ್ಯನ ಜೀವನದಲ್ಲಿ ಭೌತಿಕ ಮತ್ತು ಬೌದ್ಧಿಕ ಬೆಳವಣಿಗೆಯಷ್ಟೇ ಭಾವನಾತ್ಮಕ ಬೆಳವಣಿಗೆಯೂ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸುವುದು ಸವಾಲಿನ ಕೆಲಸವಾಗಿದೆ. ಮಕ್ಕಳು ತಮ್ಮ ಜೀವನವನ್ನು ಸಾರ್ಥಕವಾಗಿ ರೂಪಿಸಿಕೊಳ್ಳಲು ಅವರಿಗೆ ಸಂಸ್ಕಾರದ ಅಗತ್ಯವಿದೆ ಎಂದರು.

ನಿಜವಾದ ಯಶಸ್ಸು:

ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ಜಿ.ಅನಂತಶಯನ ಮಾತನಾಡಿ, ಮಾಡುವ ಕೆಲಸದಲ್ಲಿ ತನ್ಮಯತೆ ಇದ್ದರೆ ತನ್ನಿಂದ ತಾನೇ ಹಾಡುಗಳು ಹುಟ್ಟಿಕೊಳ್ಳುತ್ತವೆ. ಜೀವನದಲ್ಲಿ ಗೆಲುವು ಮುಖ್ಯವಾದರೂ, ಸೋಲಿನಿಂದ ಪಾಠ ಕಲಿತು ಮುನ್ನಡೆಯುವುದೇ ನಿಜವಾದ ಯಶಸ್ಸು ಎಂದು ಹೇಳಿದರು.ರೋಟರಿ ಮಿಸ್ಟಿ ಹಿಲ್ಸ್ ನಿರ್ದೇಶಕರಾದ ಅನಿಲ್ ಎಚ್.ಟಿ, ಕನ್ನಡ ಜಾಗೃತಿ ಸಮಿತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಬಿ.ಎಸ್.ಲೋಕೇಶ್ ಸಾಗರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಭಾಗೀರಥಿ, ಪದ್ಮಶ್ರೀ ಪುರಸ್ಕೃತರಾದ ರಾಣಿ ಮಾಚಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಹಾಗೂ ಜಿಲ್ಲಾ ಬರಹಗಾರರ ಸಂಘದ ಗೌರವ ಕೋಶಾಧಿಕಾರಿ ಸಂಪತ್ ಕುಮಾರ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಸ್ವಾಗತಿಸಿದರು. ಜಯಲಕ್ಷ್ಮಿ ಮತ್ತು ತಂಡದವರು ವಂದೇ ಮಾತರಂ ಹಾಗೂ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಅವರು ನಿವೃತ್ತಿಗೊಳ್ಳಲಿರುವ ಹಿನ್ನೆಲೆ ಕಾರ್ಯಕ್ರಮದಲ್ಲಿ ಗಣ್ಯರು ಸನ್ಮಾನಿಸಿ, ಗೌರವಿಸಿದರು.ಬಾಲಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವಪ್ರತಿಭೆ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯುತ್ತಿವೆ. ಬಾಲಪ್ರತಿಭೆ ಮತ್ತು ಕಿಶೋರ ಪ್ರತಿಭೆ ವಿಭಾಗಗಳಲ್ಲಿ ಸುಗಮ ಸಂಗೀತ, ಜಾನಪದ ಗೀತೆ, ಶಾಸ್ತ್ರೀಯ ನೃತ್ಯ, ಕರ್ನಾಟಕ ಮತ್ತು ಹಿಂದೂಸ್ಥಾನಿ ವಾದ್ಯ ಸಂಗೀತ, ಶಾಸ್ತ್ರೀಯ ಸಂಗೀತ ಹಾಗೂ ಚಿತ್ರಕಲೆ ಸ್ಪರ್ಧೆಗಳು ಗಮನ ಸೆಳೆದವು.ಜಿಲ್ಲೆಯ ಐದು ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನ. 6 ರಂದು ಯುವಪ್ರತಿಭೆ ಹಾಗೂ ಸಮೂಹ ಸ್ಪರ್ಧೆಗಳು ನಡೆಯಲಿವೆ.