ಸಾರಾಂಶ
ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸುವುದು ಮತ್ತು ಅರೆ ಅಲೆಮಾರಿ ಪಟ್ಟಿಗೆ ಸೇರಿಸಲು ಪ್ರಯತ್ನಿಸುವುದು ನಮ್ಮ ಗುರಿಯಾಗಿದೆ.
ಕನ್ನಡಪ್ರಭ ವಾರ್ತೆ ತುಮಕೂರು
ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವ ಸೇನೆಯ ರಾಜ್ಯಾಧ್ಯಕ್ಷರಾಗಿ ತುಮಕೂರಿನ ಅರುಣ್ ಕೃಷ್ಣಯ್ಯ ಅವರು ಆಯ್ಕೆಯಾಗಿದ್ದಾರೆ.ತುಮಕೂರಿನ ಸಿ.ಎನ್.ವಿ.ಚೇಂಬರ್ಸ್ ನಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಿ.ವಿ.ರಮೇಶ್, ಗೌರವಾಧ್ಯಕ್ಷ ಶಿವಕುಮಾರಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್.ಆರ್, ಅವರ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆಯಲ್ಲಿ ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಅರುಣ್ ಕೃಷ್ಣಯ್ಯರನ್ನು ರಾಜ್ಯ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿ, ನೇಮಕಾತಿ ಪತ್ರವನ್ನು ವಿತರಿಸಿದರು.
ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವ ವೇದಿಕೆಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಅರುಣ್ ಕೃಷ್ಣಯ್ಯ, ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವಸೇನೆ ಆರಂಭವಾದ ದಿನದಿಂದಲೂ ಗೊಲ್ಲರ ಹಟ್ಟಿಗಳ ಅಭಿವೃದ್ಧಿ,ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸುವುದು, ಕಾಡುಗೊಲ್ಲರ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿದ್ದು, ಇದನ್ನು ನನ್ನ ಅವಧಿಯಲ್ಲಿ ಮುಂದುವರೆಸಿಕೊಂಡು ಹೋಗುವುದಲ್ಲದೇ,ಸರಕಾರದ ಮೇಲೆ ಒತ್ತಡ ತಂದು, ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸುವುದು ಮತ್ತು ಅರೆ ಅಲೆಮಾರಿ ಪಟ್ಟಿಗೆ ಸೇರಿಸಲು ಪ್ರಯತ್ನಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಹಿರಿಯರ ಸಹಕಾರದಿಂದ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿದರು.ಕಾಡುಗೊಲ್ಲರನ್ನು ಎಸ್ಟಿ ಜಾತಿ ಪಟ್ಟಿಗೆ ಸೇರಿಸಬೇಕೆಂಬ ಹೋರಾಟ ಇಂದು ನಿನ್ನೆಯದಲ್ಲ. ಹಲವಾರು ವರ್ಷಗಳ ಹೋರಾಟವಾಗಿದೆ.ಆದರೆ ಕೆಲ ತಾಂತ್ರಿಕ ಕಾರಣಗಳಿಂದ ವಿಳಂಭವಾಗುತ್ತಿದ್ದು, ಸರಕಾರದ ಮೇಲೆ ಒತ್ತಡ ತಂದು ಈ ಕೆಲಸವನ್ನು ಅತ್ಯಂತ ತುರ್ತಾಗಿ ಕೈಗೊಂಡರೆ ಕಾಡುಗೊಲ್ಲರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಸದ್ಯದಲ್ಲಿಯೇ ಹೋರಾಟ ರೂಪಿಸಲಾಗುವುದು ಎಂದು ಅರುಣ್ ಕೃಷ್ಣಯ್ಯ ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಯುವಸೇನೆ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.