ಆಶಾ, ಅಂಗನವಾಡಿ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಸಿ

| Published : Jan 24 2024, 02:06 AM IST

ಸಾರಾಂಶ

ಅಂಗನವಾಡಿ ನೌಕರರು ಮತ್ತು ಬಿಸಿಯೂಟ ನೌಕರರಿಗೆ ಹಾಗೂ ಆಶಾ ಮತ್ತು ಇತರೆ ಸಿಬ್ಬಂದಿಗೆ ₹31 ಸಾವಿರ ಕನಿಷ್ಠ ವೇತನ ಜಾರಿಗೊಳಿಸಿ, ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಂಸದರ ಕಚೇರಿ ಚಲೋ ಅಂಗವಾಗಿ ಸ್ಕೀಮ್ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಬಿಸಿಯೂಟ ನೌಕರರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಅಂಗನವಾಡಿ ನೌಕರರು ಮತ್ತು ಬಿಸಿಯೂಟ ನೌಕರರಿಗೆ ಹಾಗೂ ಆಶಾ ಮತ್ತು ಇತರೆ ಸಿಬ್ಬಂದಿಗೆ ₹31 ಸಾವಿರ ಕನಿಷ್ಠ ವೇತನ ಜಾರಿಗೊಳಿಸಿ, ಇತರೆ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸಂಸದರ ಕಚೇರಿ ಚಲೋ ಅಂಗವಾಗಿ ಸ್ಕೀಮ್ ನೌಕರರ ಸಂಘಟನೆಗಳು ಮತ್ತು ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಬಿಸಿಯೂಟ ನೌಕರರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೇ, ಅನಂತರ ಜಿಪಂ ಸಿಇಒ ಗರಿಮಾ ಪನ್ವಾರ್ ಮುಖಾಂತರ ಸಂಸದರು ಮತ್ತು ಮುಖ್ಯಮಂತ್ರಿ ಅವರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.

ಅಂಗನವಾಡಿ ನೌಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಸಲಿಂಗಮ್ಮ ನಾಟೇಕರ್ ಮಾತನಾಡಿ, ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿ ಇರುವ ಯೋಜನೆಗಳಾದ ಐಸಿಡಿಎಸ್, ಎಂಡಿಎಂ, ಎನ್‌ಎಚ್ಎಂ, ಐಸಿಪಿಎಸ್, ಎಸ್ಎಸ್ಎ, ಎಂಎನ್‌ಆರ್‌ಇಜಿ ಮುಂತಾದ ಯೋಜನೆಗಳನ್ನು ಕಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಆಗ್ರಹಿಸಿದರು.

ಸುಮಾರು 49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು, 21 ವರ್ಷಗಳಿಂದ ದುಡಿಯುತ್ತಿರುವ ಬಿಸಿಯೂಟ ನೌಕರರಿಗೆ ಆಶಾ ಮತ್ತು ಇತರೆ ಸಿಬ್ಬಂದಿಗೆ 31 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು. ನಿವೃತ್ತಿ ಸೌಲಭ್ಯಗಳನ್ನು ಮಾಸಿಕ ಕನಿಷ್ಠ ₹10 ಸಾವಿರ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.

ಬಿಎಲ್‌ಒ ಸರ್ವೇ ಐಸಿಡಿಎಸ್ ಯೋಜನೆಯತರ ಕೆಲಸಗಳಾದ ಭಾಗ್ಯಲಕ್ಷ್ಮೀ, ಮಾತೃವಂದನಾ, ಗೃಹಲಕ್ಷ್ಮಿ ಮುಂತಾದ ಕೆಲಸಗಳಲ್ಲಿ ಅಂಗನವಾಡಿ ನೌಕರರ ಬಳಕೆ ಕೈಬಿಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸಲು ಸುಮಾರು ವರ್ಷಗಳಿಂದ ಹೋರಾಟ, ಮುಷ್ಕರ ನಡೆಸುತ್ತಿದ್ದೇವೆ. ಆದರೆ, ಸರ್ಕಾರ ಮಾತ್ರ ನ್ಯಾಯಯುತ ಬೇಡಿಕೆಗಳ ಈಡೇರಿಸಲು ಮನಸ್ಸು ಮಾಡುತ್ತಿಲ್ಲ. ಈ ಎಲ್ಲ ಬೇಡಿಕೆಗಳಿಗೆ ಒತ್ತಾಯಿಸಿ ಸಂಸದರ ಕಚೇರಿ ಚಲೋ ಮುಖಾಂತರ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದ್ದೇವೆ ಎಂದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೆಗುಂದಿ ಮಾತನಾಡಿ, ಅಂಗನವಾಡಿ ನೌಕರರಿಗೆ ಹಾಗೂ ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮತ್ತು ನಿವೃತ್ತಿ ಸೌಲಭ್ಯ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಮುಖಂಡರಾದ ಈರಮ್ಮ ಹಯ್ಯಾಳಕರ್ ಮಾತನಾಡಿದರು. ಅಂಗನವಾಡಿ ನೌಕರ ಸಂಘದ ಜಿಲ್ಲಾಧ್ಯಕ್ಷೆ ಅನಿತಾ ಹಿರೇಮಠ್, ಸಿಐಟಿಯು ತಾಲೂಕು ಸಂಚಾಲಕ ಮಲ್ಲಯ್ಯ ಪೋಲಂಪಲ್ಲಿ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ಸಾಗರ್, ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್, ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ದಾವಲ್‌ಸಾಬ್ ನದಾಫ್‌, ಬಸಮ್ಮ ಆಲ್ದಾಳ, ನಶಿಮಾ, ಇಂದಿರಾದೇವಿ ಕೊಂಕಲ್, ಯಮನಮ್ಮ ದೋರನಹಳ್ಳಿ, ಶಾಹಿದಾ ಬೇಗಂ, ಸುನಂದಾ ಹಿರೇಮಠ್ ಇತರರಿದ್ದರು.