ಗೌರವಧನ ಹೆಚ್ಚಳದ ಆದೇಶ ಹೊರಡಿಸಲು ಆಶಾ ಕಾರ್ಯಕರ್ತೆಯರ ಆಗ್ರಹ

| Published : Mar 20 2025, 01:15 AM IST

ಗೌರವಧನ ಹೆಚ್ಚಳದ ಆದೇಶ ಹೊರಡಿಸಲು ಆಶಾ ಕಾರ್ಯಕರ್ತೆಯರ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡುವ ಅಧಿಕೃತ ಆದೇಶವನ್ನು ಕೂಡಲೇ ಹೊರಡಿಸಬೇಕು ಹಾಗೂ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ₹1 ಸಾವಿರ ಗೌರವಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಲು ಆದೇಶಿಸಬೇಕು.

ಕನ್ನಡಪ್ರಭ ವಾರ್ತೆ ಬಳ್ಳಾರಿ

ರಾಜ್ಯ ಸರ್ಕಾರ ಭರವಸೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹10 ಸಾವಿರ ಗೌರವಧನ ನೀಡುವ ಅಧಿಕೃತ ಆದೇಶವನ್ನು ಕೂಡಲೇ ಹೊರಡಿಸಬೇಕು ಹಾಗೂ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ₹1 ಸಾವಿರ ಗೌರವಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಲು ಆದೇಶಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಇದೇ ವೇಳೆ ಮಾತನಾಡಿದ ಎಐಯುಟಿಸಿ ಜಿಲ್ಲಾ ಕಾರ್ಯದರ್ಶಿ ಡಾ. ಪ್ರಮೋದ್, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಕಳೆದ ಜ. 7ರಿಂದ 10ರವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಜ. 10 ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಸಭೆ ನಡೆಸಿದ್ದರಲ್ಲದೆ, ಈಗಿರುವ ಪ್ರೋತ್ಸಾಹಧನ ಸೇರಿಸಿ ಒಟ್ಟು ₹10 ಸಾವಿರ ನೀಡುವುದಾಗಿ ಭರವಸೆ ನೀಡಿದ್ದರು. 2025ರ ಏಪ್ರಿಲ್‌ನಿಂದಲೇ ಈ ಆದೇಶ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದರು. ಬಜೆಟ್ ಪೂರ್ವಭಾವಿ ಸಭೆ ನಡೆಸಿ ಎಲ್ಲಾ ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಂತೆ ಪ್ರೋತ್ಸಾಹಧನವನ್ನು ಸಹ ಹೆಚ್ಚಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಸರ್ಕಾರ ಈವರೆಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಸಂಬಂಧ ಯಾವುದೇ ಆದೇಶ ಹೊರಡಿಸಿಲ್ಲ ಎಂದು ತಿಳಿಸಿದರಲ್ಲದೆ, ಮುಖ್ಯಮಂತ್ರಿಗಳು ತಾವೇ ನೀಡಿದ ಭರವಸೆಯಂತೆ ಆಶಾಗಳ ಗೌರವಧನ ಹೆಚ್ಚಳ ಮಾಡಬೇಕು. ಕೂಡಲೇ ಈ ಸಂಬಂಧ ಆದೇಶವನ್ನು ಹೊರಡಿಸಬೇಕು ಎಂದು ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷೆ ಎ.ಶಾಂತಾ ಮಾತನಾಡಿದರು. ಜಿಲ್ಲಾಧ್ಯಕ್ಷೆ ಗೀತಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಂಘಟನೆಯ ಜಿಲ್ಲಾ ಪ್ರಮುಖರಾದ ಡಿ.ನಾಗಲಕ್ಷ್ಮಿ, ರಾಜೇಶ್ವರಿ, ಅಂಬಿಕಾ, ಜಲಜಾಕ್ಷಿ, ಈರಮ್ಮ, ಸುಜಾತಾ, ಮಹಾಲಕ್ಷ್ಮಿ, ಚಂದ್ರಲೇಖಾ, ಹನುಮಂತಮ್ಮ, ಶಾಂತಮ್ಮ, ಅಮೃತಾ ಸೇರಿದಂತೆ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿದ್ದ ನೂರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಗಾಂಧಿಭವನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಗಡಗಿಚನ್ನಪ್ಪ ವೃತ್ತದ ಮೂಲಕ ಜಿಲ್ಲಾಡಳಿತ ಕಚೇರಿ ತಲುಪಿ, ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.