ಆ. 12ರಿಂದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

| Published : Aug 10 2025, 01:32 AM IST

ಸಾರಾಂಶ

ಆ. 12ರಿಂದ 14ರ ವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ ಹೇಳಿದರು.

ಹಾವೇರಿ: ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಮಾತುಕೊಟ್ಟಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿ ಆ. 12ರಿಂದ 14ರ ವರೆಗೆ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025 ಜನವರಿಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸರ್ಕಾರ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೂ ಯಾವ ಬೇಡಿಕೆಗಳು ಈಡೇರಿಲ್ಲ. ಬದಲಾಗಿ ಆಶಾ ಸಾಫ್ಟ್‌ ಎಂದು ಅವೈಜ್ಞಾನಿಕ ತಂತ್ರಜ್ಞಾನವನ್ನು ತಂದು ಆಶಾ ಕಾರ್ಯಕರ್ತೆಯರಿಗೆ ಇನ್ನಿಲ್ಲದ ಸಂಕಷ್ಟವನ್ನು ತಂದೊಡ್ಡಿದ್ದಾರೆ. ಇದು ಅವೈಜ್ಞಾನಿಕವಾಗಿದೆ. ವಿವಿಧ ಕೆಲಸಗಳನ್ನು ಆಶಾಗಳಿಂದಲೇ ಮಾಡಿಸಿಕೊಂಡು ಸಂಬಳವನ್ನು ಸರಿಯಾಗಿ ಕೊಡುವುದಿಲ್ಲ ಎಂದು ದೂರಿದರು.

ಅಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ, ಗ್ಯಾರಂಟಿಯನ್ನು ಕಳೆದ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. ರಾಜ್ಯ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಒಂದು ಸಾವಿರ ರುಪಾಯಿ ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿ ಹೆಚ್ಚಿಸುವುದನ್ನು ಕೈಬಿಡಬೇಕು. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯ ಅವೈಜ್ಞಾನಿಕ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು. 2025ರ ಜೂನ್, ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿಯೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪುರಮಠ ಮಾತನಾಡಿ, ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿಯನ್ನು ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಆ. 12ರಿಂದ ಮೂರು ದಿನಗಳ ಕಾಲ ನಡೆಸಲಾಗುತ್ತದೆ. ಇದಕ್ಕೂ ಮೊದಲು ಕಾಗಿನೆಲೆ ರಸ್ತೆಯ ಮುರುಘರಾಜೇಂದ್ರ ಮಠದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಈ ಬಗ್ಗೆ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ತಿಂಗಳಿಗೆ ₹15 ಸಾವಿರ ವೇತನ ಪಡೆಯುತ್ತಿದ್ದೇವೆ ಎಂದು ಕೆಲವರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಆದರೆ ವಾಸ್ತವವಾಗಿ ತಿಂಗಳಿಗೆ ₹7 ಸಾವಿರ ಪಡೆಯುತ್ತಿದ್ದೇವೆ. ಎಷ್ಟೇ ಕೆಲಸ ಮಾಡಿದರೂ ₹7 ಸಾವಿರಕ್ಕಿಂತ ಹೆಚ್ಚು ವೇತನ ನಮಗೆ ಸಿಗುವುದಿಲ್ಲ ಎಂದರು.

ಸಂಘದ ಉಪಾಧ್ಯಕ್ಷೆ ಮಂಜುಳಾ ಮಾಸೂರ ಮಾತನಾಡಿದರು. ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರಾದ ರತ್ನಾ ಗಿರಣಿ, ಮಧುಲತಾ, ಪುಪ್ಪಾ ಮಡ್ಲೂರಮಠ, ರೇಖಾ ಕರಿಗಾರ, ರೇಹನಾಬಾನು, ರತ್ನಾ ಮಕರವಳ್ಳಿ, ಹೂವಕ್ಕ ಮಕರವಳ್ಳಿ, ನೀಲವ್ವ ಲಮಾಣಿ, ಮಂಗಳಾ ಚಪ್ಪರದಹಳ್ಳಿಮಠ, ಸವಿತಾ ಪಾಟೀಲ, ವಿನೋದಾ ಹೊಂಡದ ಇತರರು ಇದ್ದರು.