ಹಾವೇರಿಯಲ್ಲಿ ಮುಂದುವರಿದ ಆಶಾಗಳ ಅಹೋರಾತ್ರಿ ಧರಣಿ

| Published : Aug 14 2025, 01:00 AM IST

ಸಾರಾಂಶ

ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಶಾಮಿಯಾನ ಹಾಕಿಕೊಂಡು ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಜಿಟಿ ಜಿಟಿ ಮಳೆಯಲ್ಲೇ ಹೋರಾಟ ಮುಂದುವರಿಸಿದರು.

ಹಾವೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕರೆ ನೀಡಿದ್ದ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಎರಡನೇ ದಿನವಾದ ಬುಧವಾರವೂ ಮುಂದುವರಿಯಿತು. ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಶಾಮಿಯಾನ ಹಾಕಿಕೊಂಡು ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಜಿಟಿ ಜಿಟಿ ಮಳೆಯಲ್ಲೇ ಹೋರಾಟ ಮುಂದುವರಿಸಿದರು. ಸಂಘಟನೆ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ ಮಾತನಾಡಿ, ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಮಾತು ಕೊಟ್ಟಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. 2025ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಜರುಗಿದ ಬೃಹತ್ ಪ್ರತಿಭಟನೆಯಲ್ಲಿ ಸರ್ಕಾರ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೂ ಬೇಡಿಕೆಗಳು ಈಡೇರಿಲ್ಲ ಎಂದರು.

ಆಶಾ ಸಾಫ್ಟ್ ಎಂದು ಅವೈಜ್ಞಾನಿಕ ತಂತ್ರಜ್ಞಾನವನ್ನು ಅಳವಡಿಸಿದ್ದು, ಇದರಿಂದ ಇನ್ನಿಲ್ಲದ ಸಂಕಷ್ಟವನ್ನು ತಂದೊಡ್ಡಿದ್ದಾರೆ. ಇದು ಅವೈಜ್ಞಾನಿಕವಾಗಿದೆ. ವಿವಿಧ ಕೆಲಸಗಳನ್ನು ಆಶಾಗಳಿಂದಲೇ ಮಾಡಿಸಿಕೊಂಡು ಸಂಬಳವನ್ನು ಸರಿಯಾಗಿ ಕೊಡುವುದಿಲ್ಲ ಎಂದು ದೂರಿದರು.ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ಕನಿಷ್ಠ ₹10 ಸಾವಿರ ಗ್ಯಾರಂಟಿಯನ್ನು ಕಳೆದ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. ರಾಜ್ಯ ಬಜೆಟ್‌ನಲ್ಲಿ ಎಲ್ಲ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಒಂದು ಸಾವಿರ ರು. ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.ಸಂಘದ ಜಿಲ್ಲಾಧ್ಯಕ್ಷೆ ಜಯಶೀಲಾ ಬಂಕಾಪುರಮಠ ಮಾತನಾಡಿ, ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿ ಹೆಚ್ಚಿಸುವುದನ್ನು ಕೈಬಿಡಬೇಕು, ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಆಗ್ರಹಿಸಿದರು.ಸಂಘದ ರಾಜ್ಯ ಮಾರ್ಗದರ್ಶಕ ರಾಮಾಂಜನೇಯಪ್ಪ ಆಲದಹಳ್ಳಿ, ಉಪಾಧ್ಯಕ್ಷೆ ಮಂಜುಳಾ ಮಾಸೂರ ಮಾತನಾಡಿದರು. ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರಾದ ರತ್ನಾ ಗಿರಣಿ, ಮಧುಲತಾ, ಪುಷ್ಪಾ ಮಡ್ಲೂರಮಠ, ರೇಖಾ ಕರಿಗಾರ, ರೇಹನಾಬಾನು, ರತ್ನಾ ಮಕರವಳ್ಳಿ, ಹೂವಕ್ಕ ಮಕರವಳ್ಳಿ, ನೀಲವ್ವ ಲಮಾಣಿ, ಮಂಗಳಾ ಚಪ್ಪರದಹಳ್ಳಿಮಠ, ಸವಿತಾ ಪಾಟೀಲ, ವಿನೋದಾ ಹೊಂಡದ, ಪ್ರೇಮಾ, ರೂಪಾ, ಗಂಗಮ್ಮ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.ಪ್ರತಿಭಟನಾಕಾರರ ಮನವೊಲಿಕೆ ವಿಫಲಪ್ರತಿಭಟನಾ ಸ್ಥಳಕ್ಕೆ ಪ್ರಭಾರ ಡಿಎಚ್‌ಒ ಡಾ. ಜಯಾನಂದ ಬುಧವಾರ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಜಿಲ್ಲಾ ಮಟ್ಟದಲ್ಲಿ ಬಗೆಹರಿಯುವಂತಹ ಸಮಸ್ಯೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ರಾಜ್ಯ ಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿ ಪ್ರತಿಭಟನೆ ಹಿಂಪಡೆಯುವಂತೆ ಮನವೊಲಿಸಲು ಯತ್ನಿಸಿದರು. ಆದರೆ ಪಟ್ಟು ಬಿಡದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮುಂದುವರಿಸಿದರು.