ಆರೋಗ್ಯ ಯೋಜನೆಗೆ ಆಶಾಗಳ ಪಾತ್ರ ಹಿರಿದು: ಸಚಿವ ಡಿ.ಸುಧಾಕರ್

| Published : Aug 05 2025, 12:30 AM IST

ಆರೋಗ್ಯ ಯೋಜನೆಗೆ ಆಶಾಗಳ ಪಾತ್ರ ಹಿರಿದು: ಸಚಿವ ಡಿ.ಸುಧಾಕರ್
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿರುವ ಗೃಹ ಆರೋಗ್ಯ ಯೋಜನೆಯು ಮಹತ್ವಪೂರ್ಣದ್ದಾಗಿದ್ದು ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಶೀಘ್ರ ಚಿಕಿತ್ಸೆ ಕೊಡಿಸುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ರಾಜ್ಯ ಸರ್ಕಾರ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿರುವ ಗೃಹ ಆರೋಗ್ಯ ಯೋಜನೆಯು ಮಹತ್ವಪೂರ್ಣದ್ದಾಗಿದ್ದು ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಶೀಘ್ರ ಚಿಕಿತ್ಸೆ ಕೊಡಿಸುವಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಗೃಹ ಆರೋಗ್ಯ ಯೋಜನೆ ಕುರಿತಂತೆ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಹಾಯಕಿಯರಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಶ್ರೇಷ್ಠವಾದುದು.ಒತ್ತಡದ ಜೀವನದಲ್ಲಿ ಜನರು ನೂರಾರು ಕಾಯಿಲೆಗಳ ನಡುವೆ ಬದುಕು ಸಾಗಿಸುತ್ತಿದ್ದಾರೆ. ಕಾಯಿಲೆಗಳು ಬಂದಿದ್ದರೂ ಸಹ ಪ್ರಾಥಮಿಕ ಹಂತದಲ್ಲಿಯೇ ಗುರುತಿಸದೆ ಮಾರಣಾಂತಿಕವಾದ ಬಳಿಕ ಚಿಕಿತ್ಸೆಗೆ ಪರದಾಡುವುದನ್ನು ಗಮನಿಸುತ್ತಿದ್ದೇವೆ. ಇಂತಹ ಸ್ಥಿತಿಯಿಂದ ಜನಸಾಮಾನ್ಯರನ್ನು ಪಾರುಮಾಡುವ ಸಲುವಾಗಿ ಸರ್ಕಾರ ಉತ್ತಮ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ವಿವಿಧ ರೋಗಗಳನ್ನು ಗುರುತಿಸುವಂತಹ ಗೃಹ ಆರೋಗ್ಯ ಯೋಜನೆಯನ್ನು ಕಳೆದ ವರ್ಷ ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಜಾರಿಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ 5 ಬಗೆಯ ರೋಗಗಳನ್ನು ಪತ್ತೆಹಚ್ಚಲು ತರಬೇತಿ ನೀಡಿ ಅನುಷ್ಠಾನಗೊಳಿಸಲಾಗಿತ್ತು. ಈ ಯೋಜನೆ ಯಶಸ್ವಿಗೊಂಡಿದ್ದರಿಂದ ಇದೀಗ ನಮ್ಮ ಸರ್ಕಾರ ಇಡೀ ರಾಜ್ಯಕ್ಕೆ ಗೃಹ ಆರೋಗ್ಯ ಯೋಜನೆಯನ್ನು ವಿಸ್ತರಿಸಿದ್ದು ಇದರ ಜತೆಗೆ ಮಧುಮೇಹ, ರಕ್ತದೊತ್ತಡ, ವಿವಿಧ ಬಗೆಯ ಕ್ಯಾನ್ಸರ್ ಸೇರಿದಂತೆ 14 ಬಗೆಯ ರೋಗ ಪತ್ತೆಹಚ್ಚುವ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ತಿಳಿಸಿದರು.

ಜನರಲ್ಲಿ ಸುಪ್ತವಾಗಿರುವ ರೋಗಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿದರೆ ತ್ವರಿತ ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸಲು ಸಾಧ್ಯವಿದೆ. ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸುವಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚು ಇದೆ. ಆಶಾ ಕಾರ್ಯಕತೆರ್ಯರು ಮನೆ ಮನೆ ಭೇಟಿ ನೀಡಿ ಆರೋಗ್ಯ ಇಲಾಖೆ ನಿಗದಿಪಡಿಸಿರುವ ಪ್ರಶ್ನಾವಳಿಗಳು, ರೋಗ ಲಕ್ಷಣಗಳ ಮೂಲಕ ರೋಗಗಳನ್ನು ಪತ್ತೆ ಹಚ್ಚಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲು ನೆರವಾಗಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ ಗುಣಪಡಿಸುವುದು ಮಹತ್ವದ್ದಾಗಿದೆ. ಕಾಯಿಲೆಗಳು ಸುಪ್ತವಾಗಿದ್ದು ಮನುಷ್ಯನ ಜೀವಕ್ಕೆ ಕಂಟಕವಾಗುವ ಅನೇಕ ನಿದರ್ಶನಗಳಿವೆ. ಗ್ರಾಮಗಳಲ್ಲಿ ಆರೋಗ್ಯ ಸೇವೆ, ತಪಾಸಣೆ, ಚಿಕಿತ್ಸೆ ಪಡೆಯುವ ಬಗ್ಗೆ ಜಾಗೃತಿಯ ಕೊರತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಗೊಳಿಸಿದ್ದು ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಗಾಗಿ ಸಿದ್ಧಪಡಿಸಲಾಗಿರುವ ಗೃಹ ಆರೋಗ್ಯ ಯೋಜನೆಯ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಡಿಎಚ್‍ಒ ಡಾ.ರೇಣುಪ್ರಸಾದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಜಿಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾದ್ಯಕ್ಷ ಡಿ.ಎನ್.ಮೈಲಾರಪ್ಪ, ಜಿಪಂ ಉಪ ಕಾರ್ಯದರ್ಶಿ ರಂಗಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಂಬಾಳಿಮಠ ಸೇರಿದಂತೆ ಆರೋಗ್ಯ ಇಲಾಖೆಯ ಅನುಷ್ಠಾನ ಅಧಿಕಾರಿಗಳು,ಆಶಾ ಕಾರ್ಯಕರ್ತೆಯರು, ಆರೋಗ್ಯ ಕೇಂದ್ರದ ಸಹಾಯಕಿಯರು ಹಾಜರಿದ್ದರು.