ಸಾರಾಂಶ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ನೇಮಿಸಲಾಗಿದೆ. ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ। ಮಂಜುನಾಥ್ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯಥಿ ಆಗಿದ್ದಾರೆ.
ಕನ್ನಡಪ್ರಭವಾರ್ತೆ ಬೆಂಗಳೂರು
ಹೃದ್ರೋಗ ತಜ್ಞ ಡಾ। ಸಿ.ಎನ್.ಮಂಜುನಾಥ್ ಕಣಕ್ಕಿಳಿದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಉಸ್ತುವಾರಿಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಹಿಸಲಾಗಿದೆ.ಗುರುವಾರ ಶಾಸಕ ಉದಯ್ ಗರುಡಾಚಾರ್ ನಿವಾಸದಲ್ಲಿ ಜೆಡಿಎಸ್-ಬಿಜೆಪಿ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಶಾಸಕರಾದ ರವಿಸುಬ್ರಹ್ಮಣ್ಯ, ರಾಮಮೂರ್ತಿ, ಸತೀಶ್‌ರೆಡ್ಡಿ, ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ ಇತರರು ಭಾಗವಹಿಸಿದ್ದರು. ಈ ವೇಳೆ ಬೆಂಗಳೂರಿನ ಮೂರು ಕ್ಷೇತ್ರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆಲ್ಲಿಸಿಕೊಳ್ಳಬೇಕು ಎಂಬ ತೀರ್ಮಾನ ಕೈಗೊಳ್ಳಲಾಯಿತು.
ಈ ವೇಳೆ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರಿನ ಮೂರು ಕ್ಷೇತ್ರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಕುರಿತು ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜವಾಬ್ದಾರಿಯನ್ನು ಅಶೋಕ್ ಅವರಿಗೆ ನೀಡಲಾಗಿದೆ. ಇನ್ನು, ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಬಂಡಾಯ ವಿಚಾರದ ಬಗ್ಗೆ ಹೆಚ್ಚು ಗಮನ ಕೊಡುವ ಅಗತ್ಯ ಇಲ್ಲ. ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು, ಸಮನ್ವಯ ಕೊರತೆಯಾಗದಂತೆ ನಿಗಾವಹಿಸಲಾಗಿದೆ ಎಂದು ಹೇಳಿದರು.ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಬೆಂಗಳೂರಲ್ಲಿ ಅತೀ ಹೆಚ್ಚು ಮತಗಳ ಅಂತದಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಬೇಕು. ಈ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ಕುಮಾರಸ್ವಾಮಿ ಮಂಡ್ಯದಲ್ಲಿ ಹಾಗೂ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏ. 4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಸಚಿವ ವಿ ಸೋಮಣ್ಣ ಏ.3 ರಂದು ಉಮೇದುವಾರಿಕೆ ಮಾಡಲಿದ್ದಾರೆ ಎಂದರು.