ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನಾಂಬೆ ದೇವಿಯ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವುದು ಜಿಲ್ಲಾಡಳಿತದ ಉದ್ದೇಶವಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ನಗರದ ಎನ್. ಆರ್. ವೃತ್ತದಿಂದ ಹೊಸ ಬಸ್ ನಿಲ್ದಾಣ ಹಾಗೂ ನ್ಯಾಯಾಲಯವನ್ನು ಸಂಪರ್ಕಿಸುವ ರೈಲ್ವೆ ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿಯನ್ನು ಹಾಸನಾಂಬ ಜಾತ್ರೆ ಆರಂಭಕ್ಕೂ ಮುನ್ನ ಮುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದರು.ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನಾಂಬೆ ದೇವಿಯ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವುದು ಜಿಲ್ಲಾಡಳಿತದ ಉದ್ದೇಶವಾಗಿದೆ ಎಂದರು. ಮೇಲ್ಸೇತುವೆಯ ಡಾಂಬರೀಕರಣ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಅರ್ಧದಷ್ಟು ಕೆಲಸ ಪೂರ್ಣಗೊಂಡಿದೆ. ಉಳಿದ ಕಾಮಗಾರಿಯನ್ನೂ ತ್ವರಿತವಾಗಿ ಮುಗಿಸುವಂತೆ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೂ ಏಳೆಂಟು ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ. ಹಾಸನಾಂಬೆ ಜಾತ್ರೆಯ ಹಿನ್ನೆಲೆಯಲ್ಲಿ ಅಕ್ಟೋಬರ್ ೨೯ ಅಥವಾ ೩೦ರೊಳಗೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ಮೇಲ್ಸೇತುವೆಯ ಎರಡೂ ಬದಿಗಳಲ್ಲಿ ಸಂಪರ್ಕ ಕಲ್ಪಿಸುವ ಸರ್ವೀಸ್ ರಸ್ತೆ ಕಾಮಗಾರಿ ಇನ್ನೂ ಬಾಕಿ ಇದೆ. ಹೊಸ ಬಸ್ ನಿಲ್ದಾಣದ ಕಡೆಗೆ ಸಾಗುವ ಸರ್ವೀಸ್ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ಒಂದು ಅಥವಾ ಎರಡು ತಿಂಗಳು ಬೇಕಾಗಬಹುದು. ಪ್ರಸ್ತುತ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರೆ ಎರಡೂ ದಿಕ್ಕುಗಳಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗಲಿದ್ದು, ವಾಹನ ದಟ್ಟಣೆ ಕಡಿಮೆಯಾಗುವುದರ ಜತೆಗೆ ಸಂಚಾರ ಪೊಲೀಸರಿಗೂ ನಿರ್ವಹಣೆ ಸುಲಭವಾಗಲಿದೆ. ನಂತರ ಸರ್ವೀಸ್ ರಸ್ತೆ ಕಾಮಗಾರಿಯನ್ನೂ ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಸ್ಥಳೀಯರು ರಸ್ತೆ ಕಾಮಗಾರಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಹಾಗೂ ಅಗತ್ಯತೆಗಳನ್ನು ಗಮನಕ್ಕೆ ತಂದಿದ್ದಾರೆ. ಅವುಗಳನ್ನು ಪರಿಶೀಲಿಸಿ, ಸಾಧ್ಯವಿರುವ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು. ಸದ್ಯ ಮೇಲ್ಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಒದಗಿಸುವುದೇ ಪ್ರಮುಖ ಆದ್ಯತೆಯಾಗಿದೆ ಎಂದರು.ಇದೇ ಸಂದರ್ಭದಲ್ಲಿ ಸ್ಥಳೀಯರಿಗೆ ಸುಗಮ ಹಾಸನಾಂಬೆ ದರ್ಶನ ಮಾಡುವ ಅವಕಾಶ ಕುರಿತು ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು. ಹಾಸನಕ್ಕೆ ವಿವಿಧ ಜಿಲ್ಲೆ ಹಾಗೂ ತಾಲೂಕುಗಳಿಂದ ಆಗಮಿಸುವ ರೈಲ್ವೆ ಪ್ರಯಾಣಿಕರು ಮತ್ತು ಹಾಸನಾಂಬೆ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಪ್ರಯಾಣಿಕರಿಗೆ ಅಗತ್ಯ ಮಾಹಿತಿ, ಸಂಪರ್ಕ ವ್ಯವಸ್ಥೆ ಹಾಗೂ ಇತರ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ಭರವಸೆ ನುಡಿದರು.ಇದೇ ವೇಳೆ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ದೇವರಾಜೇಗೌಡ, ರಘು ದಾಸರಕೊಪ್ಪಲು, ನವೀದ್, ಆರೀಫ್ ಮೊದಲಾದವರಿದ್ದರು.========
ಫೋಟೋ:ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸಂಸದ ಶ್ರೇಯಸ್ ಎಂ ಪಟೇಲ್ ಪರೀಕ್ಷಿಸಿದರು. ಈ ವೇಳೆ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ರಂಜಿತ್ ಗೊರೂರು, ದೇವರಾಜೇಗೌಡ, ರಘು ದಾಸರಕೊಪ್ಪಲು ಇತರರು ಜೊತೆಗಿದ್ದರು.