ವೈದ್ಯರ ಮೇಲೆ ಹಲ್ಲೆ: ಕ್ರಮಕ್ಕೆ ಕನಕ ನೌಕರರ ಸಂಘ ಆಗ್ರಹ

| Published : Sep 19 2024, 01:55 AM IST

ವೈದ್ಯರ ಮೇಲೆ ಹಲ್ಲೆ: ಕ್ರಮಕ್ಕೆ ಕನಕ ನೌಕರರ ಸಂಘ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕನಕ ನೌಕರರ ಸಂಘದ ಪದಾಧಿಕಾರಿಗಳು ಎಸ್ಪಿ ಜಿತೇಂದರ್ ಕುಮಾರ್ ದಹೀಮ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆ ಮೂಳೆ ತಜ್ಞ ಡಾ.ಬಿ.ಎಸ್‌. ವೆಂಕಟೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕನಕ ನೌಕರರ ಸಂಘ ಪೊಲೀಸ್ ಇಲಾಖೆ ಒತ್ತಾಯಿಸಿದೆ.

ಜಿಲ್ಲಾ ರಕ್ಷಣಾಧಿಕಾರಿ ಜಿತೇಂದರ್ ಕುಮಾರ್ ದಹೀಮರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ವೈದ್ಯರ ಮೇಲೆ ಅನಗತ್ಯವಾಗಿ ಹಲ್ಲೆ ಮಾಡಿದ್ದಾರೆ, ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ಮಾಡುವ ಮೂಲಕ ಕಾನೂನನ್ನು ಕೈಗೆತ್ತಿಕೊಂಡಿದ್ದಾರೆ, ಕೊರಳ ಪಟ್ಟಿ ಹಿಡಿದು ಎಳೆದಾಡಿ ಚಪ್ಪಲಿಯಿಂದ ಹಲ್ಲೆ ನಡೆಸುವ ಮೂಲಕ ಅಮಾನುಷವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದರು.

ಕರ್ತವ್ಯ ನಿರತರ ಮೇಲೆ ಹಲ್ಲೆ ನಡೆಸಿದರೆ ವೈದ್ಯರು ಕರ್ತವ್ಯವನ್ನು ನಿರ್ವಹಿಸುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಈ ಕೃತ್ಯ ಖಂಡನೀಯವಾಗಿದ್ದು, ಯಾವುದೇ ಮುಲಾಜಿಗೂ ಒಳಗಾಗದೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಂತಹ ಕೃತ್ಯಗಳು ಮರುಕಳಿಸದಂತೆ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಕನಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಜೆ.ಎಚ್‌. ಪ್ರಹ್ಲಾದ, ಉಪಾಧ್ಯಕ್ಷ ಲಕ್ಕಿ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಸುರೇಶ್, ಸಂಘಟನಾ ಕಾರ್ಯದರ್ಶಿ ಸಿ.ಸಿ. ರಂಗಣ್ಣ, ಸಹ ಕಾರ್ಯದರ್ಶಿ ಡಿ. ಪ್ರಕಾಶ್ ಹಾಜರಿದ್ದರು.