ತಾಲೂಕಿನ ನೇಶ್ವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಹಾಯಕ ನಿರ್ದೇಶಕ ಪ್ರದೀಪ್ ಗಣೇಶ್ಕರ್ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದರು.
ರಟ್ಟಿಹಳ್ಳಿ: ತಾಲೂಕಿನ ನೇಶ್ವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಸಹಾಯಕ ನಿರ್ದೇಶಕ ಪ್ರದೀಪ್ ಗಣೇಶ್ಕರ್ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿದರು.
ಈ ವೇಳೆ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಅವರು, ಕಾರ್ಮಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಅಗತ್ಯ ಪರಿಹಾರ ಕ್ರಮಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ವಿಬಿ ಜಿ ರಾಮ್ ಜಿ ಯೋಜನೆಯ ಉದ್ದೇಶ, ಯೋಜನೆಯಡಿ ದೊರೆಯುವ ಸೌಲಭ್ಯಗಳು, ಕಾರ್ಮಿಕರಿಗೆ ಲಭ್ಯವಾಗುವ ಉದ್ಯೋಗಾವಕಾಶಗಳು ಹಾಗೂ ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು. ವಿಬಿ ಜಿ ರಾಮ್ ಜಿ ಯೋಜನೆಯಡಿ ಗ್ರಾಮದ ಯಾವುದೇ ಕುಟುಂಬವು ಹೊರಗುಳಿಯಬಾರದು. ಇದೀಗ ಜಾಬ್ ಕಾರ್ಡ್ ಮೇಳ ಪ್ರಾರಂಭಿಸಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನದಲ್ಲಿ ಪ್ರತಿ ಕುಟುಂಬಕ್ಕೂ ಜಾಬ್ ಕಾರ್ಡ್ ನೀಡಲಾಗುವುದು. ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ ಒದಗಿಸುವ ಭರವಸೆ ಇದ್ದು, ದಿನಕ್ಕೆ ₹ 382 ಕೂಲಿ ನೀಡಲಾಗುತ್ತದೆ. ಅಲ್ಲದೆ, ಮಹಿಳೆಯರು ಮತ್ತು ಪುರುಷರಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಲಾಗುತ್ತದೆ ಎಂದು ತಿಳಿಸಿದರು.ವಯೋವೃದ್ಧರು, ವಿಶೇಷಚೇತನರು ಹಾಗೂ ಗರ್ಭಿಣಿ ಮಹಿಳೆಯರಿಗೆ ಅವರ ಪರಿಸ್ಥಿತಿಗೆ ಅನುಗುಣವಾಗಿ ಕೆಲಸದಲ್ಲಿ ಅಗತ್ಯ ರಿಯಾಯಿತಿ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಯೋಜನೆಯಡಿ ದೊರೆಯುವ ಉದ್ಯೋಗಾವಕಾಶಗಳು ಮತ್ತು ಸೌಲಭ್ಯಗಳನ್ನು ಅರ್ಹರು ಸದುಪಯೋಗಪಡಿಸಿಕೊಳ್ಳುವಂತೆ ಕಾರ್ಮಿಕರು ಹಾಗೂ ಗ್ರಾಮಸ್ಥರಿಗೆ ಮನವಿ ಮಾಡಿದರು.
ತಾಲೂಕು ಐಇಸಿ ಸಂಯೋಜಕ ಕುಮಾರಯ್ಯ ಚಿಕ್ಕಮಠ ಮಾತನಾಡಿ, ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೆರೆ ಅಭಿವೃದ್ಧಿ ಸೇರಿದಂತೆ ವಿವಿಧ ಜನೋಪಯೋಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ವೈಯಕ್ತಿಕ ಕಾಮಗಾರಿಗಳಾದ ಕೃಷಿಹೊಂಡ, ಎರೆಹುಳು ತೊಟ್ಟಿ, ದನದ ಕೊಟ್ಟಿಗೆ ನಿರ್ಮಾಣ ಮೂಲಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಯ ಜೊತೆಗೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಬಿಎಫ್‍ಟಿ ಮೇಘರಾಜ್ ಕಾಟೇನಹಳ್ಳಿ, ಜಿಕೆಎಂ ಜಯಮ್ಮ ಚಕ್ರಸಾಲಿ, ಕಾಯಕ ಬಂಧುಗಳಾದ ಕವಿತಾ, ಬಸವರಾಜ್, ವೀರೇಶ್ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಉಪಸ್ಥಿತರಿದ್ದರು.