ಸಾರಾಂಶ
ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಮಂಗಳೂರಿನ ಡಿಸಿ ಕಚೇರಿಯಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಂಪಾಡಿಯಿಂದ ಕೂಳೂರುವರೆಗೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಭೆಯಲ್ಲಿ ಉಪಸ್ಥಿತರಿದ್ದ ಕೈಗಾರಿಕಾ ಎಸೋಸಿಯೇಶನ್‍ಗಳ ಪದಾಧಿಕಾರಿಗಳು ಮಾತನಾಡಿ, ಹೆದ್ದಾರಿಯಲ್ಲಿ ಬೈಕಂಪಾಡಿ ಕೈಗಾರಿಕಾ ಪ್ರದೇಶ ತಿರುವಿನಲ್ಲಿ ಹಾಗೂ ಕೂಳೂರುವರೆಗಿನ ರಸ್ತೆಯಲ್ಲಿ ಹಲವು ವರ್ಷಗಳಿಂದ ನಿರಂತರ ಸಂಚಾರ ಸಮಸ್ಯೆಗಳು ಪರಿಹಾರವಾಗದಿರುವ ಬಗ್ಗೆ ಜಿಲ್ಲಾಧಿಕಾರಿ ಬಳಿ ಪ್ರಸ್ತಾವಿಸಿದರು. ಇದರಿಂದ ಸಾರ್ವಜನಿಕರ ಸುಗಮ ಸಂಚಾರ ಸೇರಿದಂತೆ ಇಲ್ಲಿನ ಉದ್ಯಮ ಚಟುವಟಿಕೆಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಬೈಕಂಪಾಡಿಯಿಂದ ಕೂಳೂರುವರೆಗೆ ಪ್ರತ್ಯೇಕ ಮೇಲ್ಸೇತುವ ನಿರ್ಮಾಣದ ಯೋಜನೆ ರೂಪಿಸಿದೆ. ಈ ಯೋಜನೆಗೆ ಶೀಘ್ರದಲ್ಲೇ ಅನುಮೋದನೆ ಪಡೆದು, ಕಾಮಗಾರಿ ಪ್ರಕ್ರಿಯೆ ಆರಂಭಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಘನ ವಾಹನಗಳು ಸಂಚರಿಸುವ ಇಲ್ಲಿನ ಹೆದ್ದಾರಿ ಸಂಚಾರ ಸಮಸ್ಯೆಯ ಬಗ್ಗೆ ತನಗೆ ಅರಿವಿದೆ. ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಕೈಗಾರಿಕಾ ಸ್ಪಂದನದಲ್ಲಿ ಉದ್ಯಮಿಗಳ ಅಹವಾಲು ಆಲಿಸಿದ ಜಿಲ್ಲಾಧಿಕಾರಿ, ತಣ್ಣೀರುಬಾವಿಯಲ್ಲಿ ಕೈಗಾರಿಕಾ ಪ್ರದೇಶಕ್ಕೆ ಸೇರಿದ ಭೂಮಿ ಒತ್ತುವರಿಯಾಗಿರುವುದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ (ಯುಜಿಡಿ) ಹಾಗೂ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ನೀರಿನ ಪೈಪ್‍ಲೈನ್ ಕಾಮಗಾರಿಯನ್ನು ಮಹಾನಗರ ಪಾಲಿಕೆ ವತಿಯಿಂದ ನಡೆಸಲು ಮನಪಾ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪಿಸಲು ಜಮೀನಿನ ಕೊರತೆ ಇರುವ ಹಿನ್ನೆಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪಿಸಲು ಜಮೀನು ಗುರುತಿಸಲು ಕೆಐಎಡಿಬಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‍ದಾಸ್ ನಾಯಕ್, ಕೆಐಎಡಿಬಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ವಿವಿಧ ಕೈಗಾರಿಕಾ ಎಸೋಸಿಯೇಶನ್‍ಗಳ ಪ್ರತಿನಿಧಿಗಳು ಇದ್ದರು.