ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಭಾರತ್ ಜೋಡೋ ನ್ಯಾಯ ಯಾತ್ರೆ ಸಾಗುತ್ತಿದ್ದ ಸಂದರ್ಭ ಅಸ್ಸಾಂನಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಡಿಕೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿತು.ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಎಚ್.ಎ., ನಿಜವಾದ ಹಿಂದೂ ರಾಹುಲ್ ಗಾಂಧಿ ಅವರು ದೇವಾಲಯ ಪ್ರವೇಶಿಸದಂತೆ ತಡೆದಿರುವುದು ಸರಿಯಲ್ಲ. ಈ ಘಟನೆ ಹಿಂದೆ ಕೇಂದ್ರ ಮತ್ತು ಅಸ್ಸಾಂ ಸರ್ಕಾರದ ಕೈವಾಡ ಇದೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ರಾಜೇಶ್ ಮಾತನಾಡಿ, ರಾಹುಲ್ ಗಾಂಧಿ ಅವರು ದೇವಾಲಯ ಪ್ರವೇಶಿಸದಂತೆ ತಡೆದಿರುವ ಬಿಜೆಪಿ ಕಾರ್ಯಕರ್ತರು ಮತ್ತು ಸರ್ಕಾರದ ನಡೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ. ದೇವಾಲಯಗಳ ಭೇಟಿ ಅವರವರ ವೈಯಕ್ತಿಕ ವಿಚಾರ. ಇದಕ್ಕೆ ಕೇಂದ್ರ ಸರ್ಕಾರ ಅಡ್ಡಿಪಡಿಸಿರುವುದು ಸರಿಯಲ್ಲ. ಇದಕ್ಕೆ ಸ್ಥಳೀಯ ಸರ್ಕಾರ ಮತ್ತು ಅಲ್ಲಿನ ಮುಖ್ಯಮಂತ್ರಿ ಪ್ರಚೋದನೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಪಕ್ಷದ ಪ್ರಮುಖರಾದ ಚುಮ್ಮಿ ದೇವಯ್ಯ, ಚಂದ್ರಶೇಖರ್, ವಿ.ಪಿ. ಸುರೇಶ್, ಪ್ರಕಾಶ್ ಆಚಾರ್ಯ, ಅಬ್ದುಲ್ ರಜಾಕ್, ಹೊಟ್ಟೆಯಂಗಡ ಫ್ಯಾನ್ಸಿ ಮತ್ತಿತರರಿದ್ದರು.