ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಕಳಂಕ ರಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಸಿ ಬಳಿಯಲು ಮುಂದಾಗಿರುವ ಕೆಲವರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.ತಾಲೂಕಿನ ಬಂಡೂರು ಸಾರ್ವಜನಿಕ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಶಾಲಾ ಶಿಕ್ಷಣ ಮತ್ತು ಸಾರಕ್ಷತಾ ಇಲಾಖೆ, ಅಕ್ಷರದಾಸೋಹ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಷನ್ ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರ ಮೊಟ್ಟೆ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಸಾಮಾಜಿಕ ನ್ಯಾಯಕತ್ವದಡಿ ಆಡಳಿತ ನಡೆಸಿ ಬಡ ಜನರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನಕ್ಕೆ ಫಲ ಸಿಗುವುದಿಲ್ಲ. ಸಿದ್ದರಾಮಯ್ಯರೊಂದಿಗೆ ಇರುವ ಯಾರನ್ನೂ ಅಲುಗಾಡಿಸಲು ಸಾಧ್ಯವಿಲ್ಲ ಎಂದರು.ಮಾನವೀಯತೆ ದೃಷ್ಟಿಯಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರಿ ಶಾಲೆಗಳ ಮಕ್ಕಳಿಗೆ ಕೋಟ್ಯಂತರ ರು. ವೆಚ್ಚದಲ್ಲಿ ಮೊಟ್ಟೆ ವಿತರಣೆ ಮಾಡುತ್ತಿರುವುದು ಶ್ಲಾಘನೀಯ. ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗೆ ದೂರದೃಷ್ಟಿಯ ಯೋಜನೆ ರೂಪಿಸುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲವೂ ಕಾರ್ಯರೂಪಕ್ಕೆ ಬರಲಿವೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ದೃಷ್ಟಿಯಿಂದ ಅಜೀಂ ಪ್ರೇಮ್ ಜಿ ಫೌಂಡೇಷನ್ ವಾರದ ಆರು ದಿನಗಳ ಕಾಲ ನೀಡುತ್ತಿರುವ ಮೊಟ್ಟೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.ಈ ವೇಳೆ ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಗ್ರಾಪಂ ಅಧ್ಯಕ್ಷ ಮರಿಮಾದಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಹದೇವು, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ನಿರ್ದೇಶಕ ಬಿ.ಪುಟ್ಟಬಸವಯ್ಯ, ಅಜೀಂ ಪ್ರೇಮ್ ಜಿ ಫೌಂಡೇಷನ್‌ನ ಹೇಮಂತ್, ಸಾರ್ವಜನಿಕ ಪ್ರೌಢಶಾಲೆ ಅಧ್ಯಕ್ಷ ಡಿ.ಸಿ.ಮರಿಗೌಡ, ಎಸ್ಡಿಎಂಸಿ ಅಧ್ಯಕ್ಷ ನಾಗರಾಜು, ಪ್ರಮುಖರಾದ ಸಿ.ಪಿ.ರಾಜು, ದೊಡ್ಡಯ್ಯ, ಶಿವಮಾದೇಗೌಡ, ಶಿವಮೂರ್ತಿ, ಎಚ್.ನಾಗೇಶ್, ಎಚ್.ಮಲ್ಲಿಕಾರ್ಜುನಯ್ಯ ಇದ್ದರು.