ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತಂತೆ ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನಿಸುತ್ತಿರುವುದಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತಂತೆ ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನಿಸುತ್ತಿರುವುದಾಗಿ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.ಮೈಲಾರಲಿಂಗೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ, ಕಾರ್ಯನಿರ್ವಾಹಕ ಅಧಿಕಾರಿಗಳ ನೂತನ ದೇವಸ್ಥಾನ ಕಾರ್ಯಾಲಯ ಉದ್ಘಾಟಿಸಿ, ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು.
ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಈ ಭಾಗದ ನಾಗರಿಕರ,ಭಕ್ತರ ಬಹುದಿನಗಳ ಬೇಡಿಕೆಯಾಗಿದೆ.ಈಗಾಗಲೇ ಈ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳನ್ನು ಆರಂಭಿಸಿರುವುದಾಗಿ ತಿಳಿಸಿದ ಅವರು, ಕೆಲವು ಕಾನೂನು ತೊಡಕುಗಳಿಂದ ಇದು ಸಾಧ್ಯವಾಗಿಲ್ಲ . ಪ್ರಯತ್ನಗಳನ್ನು ನಿರಂತರ ಮುಂದುವರೆಸುವುದಾಗಿ ಅವರು ತಿಳಿಸಿದರು.ಈ ಬಾರಿ ಶ್ರೀ ಮೈಲಾರಲಿಂಗೇಶ್ವರ ಜಾತ್ರೆ ಅಂಗವಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸುಮಾರು 30 ಲಕ್ಷ ರು,ಗಳ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾದ ಈ ಮೂರು ಅಂತಸ್ತಿನ ಕಟ್ಟಡವನ್ನು ಇಂದು ಉದ್ಘಾಟಿಸಲಾಗಿದೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸುವುದಾಗಿ ಅವರು ತಿಳಿಸಿದರು.
ಶ್ರೀ ಮೈಲಾಪುರ ಜಾತ್ರೆಗೆ ಲಕ್ಷಾಂತರ ಜನ ಆಗಮಿಸುವುದರಿಂದ ಆರಂಭ ಹಾಗೂ ಜಾತ್ರಾ ಕೊನೆಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಬೇಕು. ವಿಶೇಷವಾಗಿ ಸರಪಳಿ ಹರಿಯುವ ಪದ್ಧತಿ ಸಂದರ್ಭದಲ್ಲಿ, ಜಾತ್ರೆ ವ್ಯಾಪ್ತಿಯಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್, ಆರೋಗ್ಯ, ಅಗ್ನಿಶಾಮಕ ಇಲಾಖೆ,ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಂದ ಅವಶ್ಯಕ ಕ್ರಮ, ಶೌಚಾಲಯಗಳ ಸೂಕ್ತ ವ್ಯವಸ್ಥೆ ಮಾಡುವಂತೆ ಅವರು ತಿಳಿಸಿದರು.ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಮಾತನಾಡಿ, ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಸ್ತಾವನೆ ಸರ್ಕಾರದ ಮಟ್ಟದಲ್ಲಿ ಇದೆ. ಕಂದಾಯ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಗ್ರಾಮ ಪಂಚಾಯತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೂಕ್ತ ಕ್ರಮ ಗಳನ್ನು ಕೈಗೊಳ್ಳುತ್ತಿದ್ದಾರೆ. ಕೆರೆ ಭಾಗದಲ್ಲಿ ಎಚ್ಚರಿಕೆ ನೋಟಿಸ್ ಅಳವಡಿಸಲಾಗಿದೆ. ಮಹಿಳೆಯರು, ಮಕ್ಕಳು,ಹಿರಿಯ ನಾಗರಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಅವರು ಜಾತ್ರೆ ವ್ಯಾಪ್ತಿಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಧರಣೇಶ್, ಡಿವೈಎಸ್ ಪಿ ಭರತ ತಳವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಶಿರಸಗಿ, ತಹಸೀಲ್ದಾರ ಸುರೇಶ್ ಅಂಕಲಗಿ, ಧರ್ಮದತ್ತಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ, ಮಹದೇವಪ್ಪ ಪೂಜಾರಿ ಇತರರು ಹಾಜರಿದ್ದರು.