ಸಾರಾಂಶ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆ ಮತ್ತು ಮೈಸೂರಿನ ಮುಡಾ ಅವ್ಯವಹಾರ ಖಂಡಿಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ತಡೆದು, ಬಂಧಿಸಿ ಬಿಡುಗಡೆಗೊಳಿಸಿದರು.
ಬುಧವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಕುಮಾರಕೃಪಾ ಅತಿಥಿ ಗೃಹದಿಂದ ಕಾವೇರಿವರೆಗೆ ಕಾಲ್ನಡಿಗೆ ಜಾಥಾ ಮೂಲಕ ತೆರಳಿ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಶಾಸಕರಾದ ವಿ.ಸುನಿಲ್‌ಕುಮಾರ್, ಸಿ.ಟಿ.ರವಿ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಅರವಿಂದ ಬೆಲ್ಲದ್ ಸೇರಿದಂತೆ ಬಿಜೆಪಿಯ ಶಾಸಕರು, ಮುಖಂಡರು ಭಾಗಿಯಾಗಿದ್ದರು.
ಬೆಳಗ್ಗೆ ಮೊದಲಿಗೆ ಕುಮಾರಕೃಪಾ ಅತಿಥಿ ಗೃಹದಲ್ಲಿ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಜಮಾಯಿಸಿದರು. ಬಳಿಕ ವಿಜಯೇಂದ್ರ ಮತ್ತು ಅಶೋಕ್ ನೇತೃತ್ವದಲ್ಲಿ ಎಲ್ಲರೂ ಅತಿಥಿಗೃಹದ ಆವರಣದಿಂದ ಹೊರಬರುತ್ತಿದ್ದಂತೆ ಬ್ಯಾರಿಕೇಡ್ ಹಾಕಿ ಪೊಲೀಸರು ಎಲ್ಲರನ್ನು ತಡೆದರು.
ಆದರೂ, ಬಿಜೆಪಿಯ ಮುಖಂಡರೆಲ್ಲ ಮುತ್ತಿಗೆ ಹಾಕಲು ಮುಂದಾದಾದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದರು. ಸರ್ಕಾರ ವಿರುದ್ಧ ಘೋಷಣೆ ಕೂಗಿ ಸರ್ಕಾರವು ಅಕ್ರಮದಲ್ಲಿ ಭಾಗಿಯಾಗಿ ಸರ್ಕಾರದ ಖಜಾನೆಯನ್ನು ಲೂಟಿ ಮಾಡುತ್ತಿದೆ. ಮುಖ್ಯಮಂತ್ರಿಗಳು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಕಿಡಿಕಾರಿದರು.
ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು. ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪೊಲೀಸರ ತಡೆಯನ್ನು ಲೆಕ್ಕಿಸದೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿ ತೀವ್ರ ವಾಗ್ವಾದಗಳು ನಡೆಯಿತು. ಆಗ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಈ ವೇಳೆ ಸರ್ಕಾರವು ದೌರ್ಜನ್ಯ ಎಸಗುತ್ತಿದ್ದು, ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸುತ್ತದೆ. ಪ್ರತಿಭಟನೆಗೆ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಎಲ್ಲರನ್ನು ಪೊಲೀಸ್ ವಾಹನಗಳಲ್ಲಿ ಕರೆದೊಯ್ದು, ಬಿಡುಗಡೆ ಮಾಡಿದರು.
;Resize=(128,128))
;Resize=(128,128))
;Resize=(128,128))
;Resize=(128,128))