ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವು ಸಂಘಟನೆಗಳು ಹಾಗೂ ದುಷ್ಟಶಕ್ತಿಗಳು ಪ್ರಯತ್ನಿಸುತ್ತಿದ್ದು, ಜನರ ಮನಸ್ಥಿತಿಯನ್ನು ಹಾಳು ಮಾಡುವ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಲು ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣಕುಮಾರ್ ಆರೋಪಿಸಿದರು.
ಹಾವೇರಿ: ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವು ಸಂಘಟನೆಗಳು ಹಾಗೂ ದುಷ್ಟಶಕ್ತಿಗಳು ಪ್ರಯತ್ನಿಸುತ್ತಿದ್ದು, ಜನರ ಮನಸ್ಥಿತಿಯನ್ನು ಹಾಳು ಮಾಡುವ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸಲು ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣಕುಮಾರ್ ಆರೋಪಿಸಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶುಕ್ರವಾರ ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ, ದೇಶ ಉಳಿಸಿ ಆಂದೋಲನದ ನಿಮಿತ್ತ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಯುವಜನರಲ್ಲಿ ನಕಾರಾತ್ಮಕ ಚಿಂತನೆಗಳನ್ನು ಬಿತ್ತುವ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸುವ ಯತ್ನ ನಡೆಯುತ್ತಿದೆ. ದೇಶದ ಯುವಶಕ್ತಿಯನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನಗಳು ನಡೆಯುತ್ತಿವೆ. ಯುವಜನರಲ್ಲಿ ದೇಶದ ವ್ಯವಸ್ಥೆ ಮತ್ತು ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ನಕಾರಾತ್ಮಕ ಭಾವನೆ ಮೂಡಿಸಲಾಗುತ್ತಿದೆ. ಇಂತಹ ಬೆಳವಣಿಗೆಗಳ ಸತ್ಯಾಸತ್ಯತೆಗಳನ್ನು ಜನಸಾಮಾನ್ಯರಿಗೆ ಹಾಗೂ ಯುವಜನರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ಜನಜಾಗೃತಿ ಆಂದೋಲನ ಹಮ್ಮಿಕೊಂಡಿದೆ ಎಂದರು.
ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರತಿ 20 ವರ್ಷಗಳಿಗೊಮ್ಮೆ ನಡೆಯಬೇಕಾದ ಸಾಮಾನ್ಯ ಪ್ರಕ್ರಿಯೆಯಾಗಿದೆ. 2021ರಲ್ಲಿ ನಡೆಯಬೇಕಿದ್ದ ಈ ಪ್ರಕ್ರಿಯೆ ಕೋವಿಡ್ ಕಾರಣದಿಂದ ಸಾಧ್ಯವಾಗಿರಲಿಲ್ಲ. ಇದೀಗ ಕೇಂದ್ರ ಸರ್ಕಾರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕೈಗೊಂಡಿದ್ದು, ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದಿಲ್ಲ ಎಂಬ ಆತಂಕವನ್ನು ಜನರಲ್ಲಿ ಮೂಡಿಸುವ ಮೂಲಕ ತಪ್ಪು ಕಲ್ಪನೆ ಸೃಷ್ಟಿಸಲಾಗುತ್ತಿದೆ ಎಂದು ದೂರಿದರು.ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಬಗ್ಗೆ ಯುವಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಇಡಿ ಮತ್ತು ಸಿಬಿಐನಂತಹ ತನಿಖಾ ಸಂಸ್ಥೆಗಳ ಬಗ್ಗೆಯೂ ಹಗುರವಾಗಿ ಮಾತನಾಡುವ ಪ್ರವೃತ್ತಿ ಹೆಚ್ಚುತ್ತಿದೆ. ಸಾಂವಿಧಾನಿಕ ಸಂಸ್ಥೆಗಳ ಮೇಲಿನ ವಿಶ್ವಾಸ ಕುಂದಿಸುವ ಪ್ರಯತ್ನಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಭವಿಷ್ಯದ ಬಗ್ಗೆ ಪ್ರಶ್ನೆ ಮೂಡಿಸುತ್ತವೆ ಎಂದರು.
1975 ಮತ್ತು 1984ರಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಆಡಳಿತ ನಡೆಸಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಟೀಕಿಸಿದ ಅವರು, 1984ರ ನವೆಂಬರ್ 1ರಂದು ಸಿಖ್ ಸಮುದಾಯದ ವಿರುದ್ಧ ನಡೆದ ಹಿಂಸಾಚಾರವನ್ನು ಉಲ್ಲೇಖಿಸಿದರು. ಬಾಂಗ್ಲಾದೇಶದಿಂದ ಬಂದವರು ಭಾರತದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂಬ ಆರೋಪದ ಕುರಿತು ಮಾತನಾಡಿ, ಅಕ್ರಮ ವಲಸಿಗರ ವಿಚಾರದಲ್ಲಿ ಕಾಂಗ್ರೆಸ್ನ ನಿಲುವು ಸ್ಪಷ್ಟವಾಗಬೇಕು ಎಂದು ಆಗ್ರಹಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ 2047ರ ವೇಳೆಗೆ ವಿಕಸಿತ ಭಾರತವಾಗುವ ಗುರಿಯೊಂದಿಗೆ ಮುನ್ನಡೆಯುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳು ಪ್ರಧಾನಿಯವರ ವಿರುದ್ಧ ಅಪಪ್ರಚಾರ ಮಾಡುತ್ತಿವೆ ಎಂದು ಆರೋಪಿಸಿದರು. ದೇಶದ ಪ್ರತಿಯೊಬ್ಬ ನಾಗರಿಕರೂ ರಾಜಕೀಯ ಬೆಳವಣಿಗೆಗಳ ಸತ್ಯಾಸತ್ಯತೆ ಅರಿತು ಜಾಗರೂಕರಾಗಿರಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಶೋಭಾ ನಿಸ್ಸೀಮಗೌಡ್ರ, ನಂಜುಂಡೇಶ್ವರ ಕಳ್ಳೇರ, ಸಿದ್ದು ಚಿಕ್ಕಬಿದರಿ, ವಿಜಯಕುಮಾರ ಚಿನ್ನಿಕಟ್ಟಿ, ಅಭಿಷೇಕ್ ಗುಡಗೂರ ಉಪಸ್ಥಿತರಿದ್ದರು.