ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ-7 ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದಡಿ ಪಾಲಿಕೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಮುಖಂಡ ಶ್ರೀನಿವಾಸ ಮೋತ್ಕರ್ ವಿರುದ್ಧ ಬಳ್ಳಾರಿಯ ಎರಡು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬಳ್ಳಾರಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಹೆಸರು ಅಳಿಸಲು ಯತ್ನಿಸಲಾಗಿದೆ ಎಂಬ ಆರೋಪದ ಮೇಲೆ ಪಾಲಿಕೆ ಪ್ರತಿಪಕ್ಷ ನಾಯಕ ಶ್ರೀನಿವಾಸ ಮೋತ್ಕರ್ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಇಲ್ಲಿನ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಸೋಮವಾರ ಬಂಧಿಸಿದರು.

ನಗರದ ಗಡಗಿಚನ್ನಪ್ಪ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ, ನಗರ ಶಾಸಕರು ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ಬ್ರೂಸ್‌ಪೇಟೆ ಪೊಲೀಸ್ ಠಾಣೆಯತ್ತ ತೆರಳಿ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು.

ನಗರ ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದು ಪಾಲಿಕೆ ಪ್ರತಿಪಕ್ಷ ನಾಯಕ ಶ್ರೀನಿವಾಸ ಮೋತ್ಕರ್ ವಿರುದ್ಧ ವಿನಾಕಾರಣ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳಂತೆ ವರ್ತಿಸುತ್ತಿದ್ದಾರೆ. ಚುನಾವಣಾ ಆಯೋಗದ ಅನುಮತಿ ಇಲ್ಲದೆ ಶಾಸಕರ ಸೂಚನೆಯಂತೆ ಅಧಿಕಾರಿಗಳು ನಿಯಮ ಮೀರಿ ನಡೆದುಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪೊಲೀಸರಿಗೆ ಕ್ರಮದ ಅಧಿಕಾರವಿಲ್ಲ: ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ-7 ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದಡಿ ಪಾಲಿಕೆ ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ಮುಖಂಡ ಶ್ರೀನಿವಾಸ ಮೋತ್ಕರ್ ವಿರುದ್ಧ ಬಳ್ಳಾರಿಯ ಎರಡು ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆ ದುರುಪಯೋಗವಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆಯೇ ಹೊರತು ಪೊಲೀಸರಿಗಲ್ಲ ಎಂದು ಹೇಳಿದರು.

ನಾವು ಎಸ್‌ಐಆರ್ ಪ್ರಕ್ರಿಯೆ ಯಾವುದೇ ರೀತಿಯಲ್ಲಿ ದುರ್ಬಳಕೆ ಮಾಡಿಕೊಂಡಿಲ್ಲ. ಮತದಾರರ ಪಟ್ಟಿ ಸಮರ್ಪಕವಾಗಿ ಪರಿಶೀಲಿಸಬೇಕು ಎಂದಷ್ಟೇ ಹೇಳಿದ್ದೇವೆ. ಆದರೆ, ನಗರ ಶಾಸಕರು ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ತಂದು, ತಡರಾತ್ರಿವರೆಗೆ ಠಾಣೆಯಲ್ಲಿ ಕುಳಿತು ಎಫ್‌ಐಆರ್ ದಾಖಲಿಸುವಂತೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ರಾಜಕೀಯ ಪ್ರೇರಿತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ಗಡಗಿಚನ್ನಪ್ಪ ವೃತ್ತದಿಂದ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದರು. ಪ್ರತಿಭಟನಾಕಾರರು ಮುಂದೆ ಸಾಗಲು ಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಲು ಮುಂದಾದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ತಳ್ಳಾಟ ನಡೆಯಿತು. ಗೊಂದಲದಲ್ಲಿ ಬಿಜೆಪಿಯ ಕೆಲ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾದವು.

ಪೊಲೀಸರ ಕ್ರಮಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಕಾರ್ಯಕರ್ತರು ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು. ಬಳಿಕ ಕೆಲಹೊತ್ತಿನ ನಂತರ ಅವರನ್ನು ಬಿಡುಗಡೆಗೊಳಿಸಲಾಯಿತು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಡಾ.ಅರುಣಾ ಕಾಮಿನೇನಿ, ಕೆ.ಎ.ರಾಮಲಿಂಗಪ್ಪ, ಎಸ್. ಗುರುಲಿಂಗನಗೌಡ, ಎಚ್. ಹನುಮಂತಪ್ಪ, ಸಾಧನಾ ಹಿರೇಮಠ, ಗಣಪಾಲ ಐನಾಥ ರೆಡ್ಡಿ, ಡಾ.ಮಹಿಪಾಲ್, ಉಜ್ವಲಾ, ರಾಜೇಶ್, ಗೋವಿಂದರಾಜು, ಅಡವಿಸ್ವಾಮಿ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಬೆಂಬಲಿಗರು ಪಾಲ್ಗೊಂಡಿದ್ದರು.