ಕೊಡಗಿಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನೀಡಲು ಪ್ರಯತ್ನ: ಡಾ.ಪಾಟೀಲ

| Published : Sep 30 2024, 01:20 AM IST

ಕೊಡಗಿಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನೀಡಲು ಪ್ರಯತ್ನ: ಡಾ.ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಬಡವರ ಮಕ್ಕಳೂ ವೈದ್ಯರಾಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಬಡವರ ಮಕ್ಕಳೂ ವೈದ್ಯರಾಗಬೇಕು ಎಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ಪ್ರಯತ್ನಿಸಿದೆ. ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜಿನ ಜತೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕ್ರಿಟಿಕಲ್ ಕೇರ್ ಸೆಂಟರ್ ಆರಂಭಕ್ಕೆ ಪ್ರಯತ್ನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಆರ್ ಐ ಸ್ಕ್ಯಾನಿಂಗ್ ಉಪಕರಣಗಳನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮುಂದಿನ ದಿನದಲ್ಲಿ ಸರ್ಕಾರ, ಸಾರ್ವಜನಿಕರು ಹಾಗೂ ಖಾಸಗಿ (ಪಿಪಿಪಿ) ಅವರ ಸಹಭಾಗಿತ್ವದಲ್ಲಿ ಟ್ರಾಮ ಕೇರ್ ಸೆಂಟರ್ ಆರಂಭಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಕೊಡಗು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಅಳವಡಿಸಲಾಗಿದೆ. ಆ ನಿಟ್ಟಿನಲ್ಲಿ ಇಬ್ಬರು ವೈದ್ಯಕೀಯ ತಾಂತ್ರಿಕರನ್ನು ನೇಮಿಸಲು ತುರ್ತು ಕ್ರಮ ವಹಿಸಲಾಗುವುದು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಂದುವರಿದ ಕಾಮಗಾರಿಗೆ ಇನ್ನೂ 50 ರಿಂದ 60 ಕೋಟಿ ರು. ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆ ದಿಸೆಯಲ್ಲಿ ಶೀಘ್ರ ಹಣ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರು ತಿಳಿಸಿದರು.

ಸರ್ಕಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿ ನಿಲಯ, ವಸತಿ ಗೃಹ ಸೇರಿದಂತೆ ಹಲವು ಮೂಲಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಶರಣ ಪ್ರಕಾಶ ಪಾಟೀಲ ವಿವರಿಸಿದರು.

ರಾಜ್ಯದಲ್ಲಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳು, 2 ಇಎಸ್ ಐ ಆಸ್ಪತ್ರೆಗಳು ಸೇರಿ ಒಟ್ಟು 24 ವೈದ್ಯಕೀಯ ಆಸ್ಪತ್ರೆಗಳು ಹಾಗೂ 71 ವೈದ್ಯಕೀಯ ಕಾಲೇಜುಗಳು ಇದ್ದು, ರಾಜ್ಯದ ಪ್ರತಿಭಾವಂತ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ವೈದ್ಯರಾಗುವಲ್ಲಿ ವೈದ್ಯಕೀಯ ಕಾಲೇಜುಗಳು ಸಹಕಾರಿಯಾಗಿದೆ ಎಂದು ಸಚಿವರು ತಿಳಿಸಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ ಹಲವು ವರ್ಷಗಳ ಬೇಡಿಕೆ ಈಡೇರಿಸಲು ಪ್ರಯತ್ನಿಸಲಾಗಿದೆ. ಇನ್ನು ಮುಂದೆ ದೂರದ ಮೈಸೂರು, ಮಂಗಳೂರು ಹಾಗೂ ಸುಳ್ಯಕ್ಕೆ ಹೋಗುವುದು ತಪ್ಪಲಿದೆ. ಎಂಆರ್‌ಐ ಸ್ಕ್ಯಾನಿಂಗ್ ಮಾಡಿಸುವುದರಿಂದ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ, ಪಾರ್ಶ್ವವಾಯು, ಮೂಳೆ ಸೇರಿದಂತೆ ದೇಹದಲ್ಲಿ ಎಲ್ಲ ರೀತಿಯ ರೋಗವನ್ನು ಪತ್ತೆಹಚ್ಚಲು ಎಂಆರ್ ಐ ಸಹಕಾರಿಯಾಗಿದೆ ಎಂದು ವಿವರಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಲ್ಲಾಸ್ಪತ್ರೆ) ಜಾಗವನ್ನು ಕೊರವಂಡ ಕುಟುಂಬದವರು ದಾನವಾಗಿ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕೊರವಂಡ ತಿಮ್ಮಯ್ಯ ಅವರ ಹೆಸರನ್ನು ಇಡುವಂತಾಗಬೇಕು ಎಂದು ಶಾಸಕ ಮನವಿ ಮಾಡಿದರು.

ಶಾಸಕ ಎ.ಎ. ಪೊನ್ನಣ್ಣ ಮಾತನಾಡಿ ಸರ್ಕಾರ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ತಿಳಿಸಿದರು. ಕೋವಿಡ್ ಸಂದರ್ಭದಲ್ಲಿ ವೈದ್ಯರು ಮತ್ತು ಶ್ರುಶ್ರುಷಕರು ಹೆಚ್ಚಿನ ವೈದ್ಯಕೀಯ ಸೇವೆ ಸಲ್ಲಿಸಿರುವುದು ಶ್ಲಾಘನೀಯ ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಸಿನ್ ಅವರು ಜಿಲ್ಲೆಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ಶೀಘ್ರ ಆರಂಭವಾಗಲಿದೆ ಎಂದು ತಿಳಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ. ವಿಶಾಲ್ ಕುಮಾರ್ ಅವರು ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಕೆ.ಎಂ. ರೋಹಿಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ನಂಜುಂಡಯ್ಯ, ವೈದ್ಯಕೀಯ ಅಧೀಕ್ಷಕರಾದ ಡಾ.ಎಚ್.ಕೆ.ಸೋಮಶೇಖರ, ವಿವಿಧ ವಿಭಾಗದ ಮುಖ್ಯಸ್ಥರು ಇದ್ದರು.