ಸಾರಾಂಶ
ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಅಹೋರಾತ್ರಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಹಾಗೂ ಇತರರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತ ಭ್ರಷ್ಟ ಹಾಗೂ ಬೆಲೆ ಏರಿಕೆ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸುತ್ತಿದೆ. ಹೋರಾಟದ ಭಾಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗಮಿಸಿ, ರೂಪಾಲಿ ಎಸ್.ನಾಯ್ಕ ಹಾಗೂ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರು.ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರ ಬದುಕನ್ನು ದುರ್ಬರವಾಗಿಸಿದ ಕಾಂಗ್ರೆಸ್ ಸರ್ಕಾರ ತೊಲಗಬೇಕು. ನಮ್ಮ ಹೋರಾಟವನ್ನು ಹತ್ತಿಕ್ಕಲು ನಡೆಸಿದ ಯಾವುದೇ ಪ್ರಯತ್ನ ಸಫಲವಾಗದು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟ ನಡೆಸಲಿದ್ದಾರೆ ಎನ್ನುತ್ತಾರೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ.