ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿರುವ ಕ್ಷುಲ್ಲಕ ಗಲಾಟೆಯನ್ನು ಶಾಸಕರ ಅಣತಿಯಂತೆ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ದೊಡ್ಡದಾಗಿ ಬಿಂಬಿಸಿ ವಿನಾಕಾರಣ ರೈತರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದಿಂದ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಭದ್ರಾವತಿ

ತಾಲೂಕಿನ ಕಾರೇಹಳ್ಳಿ ಗ್ರಾಮದಲ್ಲಿ ಜಮೀನಿಗೆ ನೀರು ಹರಿಸುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಆದರೆ ಯಾರಿಗೂ ಗಂಭೀರವಾಗಿ ಗಾಯಗಳಾಗಿರುವುದಿಲ್ಲ. ರೈತರ ಕ್ಷುಲ್ಲಕ ಗಲಾಟೆಯನ್ನು ದೊಡ್ಡದಾಗಿ ಮಾಡಿ ಅಮಾಯಕ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವುದು ಖಂಡನೀಯ. ಪೊಲೀಸರು ಯಾವುದೇ ಪೂರ್ವಪರ ವಿಚಾರಿಸದೇ ಏಕಾಏಕಿ ಶಾಸಕರ ಅಣತಿಯಂತೆ ಪ್ರಕರಣ ದಾಖಲಿಸಿದ್ದಾರೆ. ತಕ್ಷಣ ಪ್ರಕರಣ ರದ್ದುಪಡಿಸಬೇಕೆಂದು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಆಗ್ರಹಿಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಮರು ಪರಿಶೀಲನೆ ನಡೆಸಿ ವಾಸ್ತವಾಂಶ ಅರಿತು ಮುಂದಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಯಿತು.

ಜೆಡಿಎಸ್ ಪಕ್ಷದ ಯುವ ಮುಖಂಡ, ನಗರಸಭೆ ಮಾಜಿ ಸದಸ್ಯ ಎಂ.ಎ ಅಜಿತ್ ನೇತೃತ್ವದಲ್ಲಿ ಠಾಣೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರಮುಖರಾದ ಟಿ. ಚಂದ್ರೇಗೌಡ, ಶಿಮುಲ್ ಮಾಜಿ ಅಧ್ಯಕ್ಷ ಡಿ. ಆನಂದ, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಮಾಜಿ ಸದಸ್ಯರಾದ ಆನಂದ್, ಗುಣಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಲವೇಶ್ ಗೌಡ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.