ದೇಶದ ಸಂವಿಧಾನ ತಿದ್ದುಪಡಿ ಅಥವಾ ಬದಲಾವಣೆಯ ಕುರಿತು ಕೆಲವರು ಆಗಾಗ್ಗೆ ಮಾತನಾಡುತ್ತಿರುತ್ತಾರೆ. ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ಪ್ರಯತ್ನ ಮಾಡಿದರೆ ಸಹಿಸಲಾಗದು.
ಕಾರಟಗಿಯಲ್ಲಿ ಸಂವಿಧಾನ ದಿನಾಚರಣೆಕನ್ನಡಪ್ರಭ ವಾರ್ತೆ ಕಾರಟಗಿ
ದೇಶದ ಸಂವಿಧಾನ ತಿದ್ದುಪಡಿ ಅಥವಾ ಬದಲಾವಣೆಯ ಕುರಿತು ಕೆಲವರು ಆಗಾಗ್ಗೆ ಮಾತನಾಡುತ್ತಿರುತ್ತಾರೆ. ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ ಪ್ರಯತ್ನ ಮಾಡಿದರೆ ಸಹಿಸಲಾಗದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಎಚ್ಚರಿಕೆ ನೀಡಿದ್ದಾರೆ.ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಗುರುವಾರ ಕೊಪ್ಪಳ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನವಿಲ್ಲದ ಆಡಳಿತ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿದ ವ್ಯಕ್ತಿಯೂ ತನ್ನ ಸಾಮರ್ಥ್ಯ ಮತ್ತು ಜನರ ಬೆಂಬಲದಿಂದ ಶಾಸಕನಾಗಿ, ಮಂತ್ರಿಯಾಗಿ ಉನ್ನತ ಸ್ಥಾನಕ್ಕೇರಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ. ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚಿಸದೇ ಇದ್ದಿದ್ದರೆ ಇಂದು ನಾನು ಶಾಸಕನಾಗಿ ನಿಮ್ಮ ಮುಂದೆ ನಿಂತು ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದರು.
ಒಬ್ಬ ರೈತನ ಮಗ, ಕೂಲಿ ಕಾರ್ಮಿಕನ ಮಗ ಅಥವಾ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ವ್ಯಕ್ತಿಗೂ ಉನ್ನತ ಸ್ಥಾನಕ್ಕೇರಲು ಸಮಾನ ಅವಕಾಶ ಕಲ್ಪಿಸಿರುವುದು ಸಂವಿಧಾನದ ಹೆಗ್ಗಳಿಕೆ. ನೂರು ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸುಗಮವಾಗಿ ನಡೆಯಲು ಸಂವಿಧಾನವೇ ಭದ್ರ ಬುನಾದಿಯಾಗಿದೆ ಎಂದು ಸಚಿವ ತಂಗಡಗಿ ಹೇಳಿದರು.ಉಪನ್ಯಾಸಕ ಗವಿಸಿದ್ದಪ್ಪ ಪೋತ್ನಾಳ ಉಪನ್ಯಾಸ ನೀಡಿದರು. ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಪೊಲೀಸ್ ವರಿಷ್ಠಾಧಿಕಾರಿ ಸಾಹಿಲ್ ಬಾಗ್ಲಾ, ಜಿಪಂ ಸಿಇಒ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ತಾಪಂ ಇಒ ಲಕ್ಷ್ಮೀದೇವಿ ಯಾದವ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅಜ್ಜಪ್ಪ ಸೋಗಲದ್, ಗೇಡ್ -೨ ತಹಸೀಲ್ದಾರ್ ಷಣ್ಮುಖಪ್ಪ, ಮುಖ್ಯಾಧಿಕಾರಿ ಡಾ. ಸಾಬಣ್ಣ ಕಟ್ಟೇಕಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್, ಪುರಸಭೆ ಅಧ್ಯಕ್ಷ ಮಂಜುನಾಥ್, ಪುರಸಭೆ ಸದಸ್ಯರಾದ ದೊಡ್ಡಬಸವರಾಜ್ ಬೂದಿ, ಹರೇಬಸ್ಸಪ್ಪ ಸಜ್ಜನ್ ಉಪಸ್ಥಿತರಿದ್ದರು.