ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಕುಡಿಯುವ ನೀರನ್ನು ಆಗಾಗ ಪರೀಕ್ಷೆ ಮಾಡಿ, ಶುದ್ಧ ಕುಡಿಯುವ ನೀರು ಪೂರೈಕೆಗೆ ಗಮನ ಹರಿಸಬೇಕು ಎಂದು ಶಾಸಕ ಡಾ. ಮಂತರ್ ಗೌಡ ಸಲಹೆ ನೀಡಿದ್ದಾರೆ. ನಗರದ ತಹಸೀಲ್ದಾರ್ ಅವರ ಕಚೇರಿಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒಗಳು, ಕಂದಾಯ ಇಲಾಖೆ ಅಧಿಕಾರಿಗಳು, ಪೊಲೀಸರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ‘ಕಾರ್ಯಪಡೆ ಸಮಿತಿ ಸಭೆ’ ನಡೆಸಿ ಅವರು ಮಾತನಾಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಬೇಕು. ತೆಂಗಿನ ಚಿಪ್ಪು, ಟಯರ್‌ ಮತ್ತಿತರ ವಸ್ತುಗಳಲ್ಲಿ ನೀರು ನಿಲ್ಲದಂತೆ ಗಮನಹರಿಸಬೇಕು. ಮಳೆ ನೀರು ಸರಾಗವಾಗಿ ಹರಿಯುವಂತಾಗಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಆಗಬೇಕು. ರಸ್ತೆ ಬದಿ ಚರಂಡಿಯಲ್ಲಿ ಸರಾಗವಾಗಿ ನೀರು ಹರಿಯುವಂತಾಗಲು ಶುಚಿಗೊಳಿಸುವ ಕಾರ್ಯ ಆಗಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಿದರು.

ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದರೆ ನಮ್ಮ ವ್ಯವಸ್ಥೆ ವಿಫಲ ಎಂದೇ ಅರ್ಥ. ಅಂಗೈಯಲ್ಲಿ ಬೆಣ್ಣೆ ಇಟ್ಟುಕೊಂಡು ತುಪ್ಪಕ್ಕೆ ಹುಡುಕಾಡಿದಂತಾಗುತ್ತದೆ ನಮ್ಮ ಪರಿಸ್ಥಿತಿ, ಆದ್ದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನ ಹರಿಸಬೇಕು ಎಂದು ಡಾ. ಮಂತರ್ ಗೌಡ ತಾಕೀತು ಮಾಡಿದರು. ಭೂ ಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರಿಗೆ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಮಾಹಿತಿ ನೀಡುವುದು, ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳುವುದು, ಸ್ಥಳೀಯರಿಗೆ ಹೆಚ್ಚಿನ ಮಳೆ ಸಂದರ್ಭದಲ್ಲಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಶಾಸಕರು ಸಲಹೆ ಮಾಡಿದರು.

ಕಾಳಜಿ ಕೇಂದ್ರಗಳಲ್ಲಿ ಆಹಾರ ದಾಸ್ತಾನು ಮಾಡಿಕೊಳ್ಳಬೇಕು. ಗುಣಮಟ್ಟದ ಆಹಾರ ಪೂರೈಸಬೇಕು. ಶಾಲೆಯ ಮುಖ್ಯೋಪಾಧ್ಯಾಯರು ಅಗತ್ಯ ಸಹಕಾರ ನೀಡಬೇಕು. ಪ್ರಾಕೃತಿಕ ವಿಕೋಪಗಳು ಯಾವ ಸಂದರ್ಭದಲ್ಲಿ ಹೇಗೆ ಬರುತ್ತದೆ ಎಂದು ಹೇಳುವುದು ಅಸಾಧ್ಯ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯವಾಗಿದೆ ಎಂದರು.

ಆಯಾಯ ಗ್ರಾಪಂ ವ್ಯಾಪ್ತಿಯಲ್ಲಿ ಜಾನುವಾರು ರಕ್ಷಣೆಗೆ ಮುಂದಾಗಬೇಕು. ಗೋರಕ್ಷಣಾ ಕೇಂದ್ರ ಆರಂಭಕ್ಕೆ ಮುಂದಾಗಬೇಕು. ಅಗತ್ಯ ಮೇವು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಶಾಸಕರು ಸೂಚಿಸಿದರು. ಪ್ರತಿ ಗ್ರಾಪಂನಲ್ಲಿ ಆಡಳಿತಾಧಿಕಾರಿಗಳು ಸಭೆ ನಡೆಸಿ ವರದಿ ನೀಡುವಂತೆ ಸೂಚಿಸಿದರು. ಅಗತ್ಯವಿರುವ ಕಡೆ ಟಾರ್ಪಲ್ ವಿತರಿಸುವಂತಾಗಬೇಕು. ಸಹಾಯವಾಣಿ ಕೇಂದ್ರ ತೆರೆದು ಮಾಹಿತಿ ನೀಡಬೇಕು. ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ನಗರಸಭೆ ಅಧ್ಯಕ್ಷ ಪಿ. ಕಲಾವತಿ ಮಾತನಾಡಿ, ನಗರಸಭೆ ವ್ಯಾಪ್ತಿಯ ಎಲ್ಲ ಬಡಾವಣೆಗಳಲ್ಲಿ ಗಿಡಗಂಟೆಗಳನ್ನು ಕಡಿಯುವ ಕೆಲಸ ಮಾಡಲಾಗುತ್ತಿದೆ. ಕಾಲುವೆ ಹಾಗೂ ಚರಂಡಿ ಶುಚಿಗೊಳಿಸುವ ಕಾರ್ಯ ನಡೆದಿದೆ. ಭೂಕುಸಿತ ಪ್ರದೇಶಗಳಲ್ಲಿನ ಜನರಿಗೆ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಕ್ಕೆ ಮಾಹಿತಿ ನೀಡಲಾಗಿದೆ ಎಂದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ, ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೀಳುವ ಹಂತದಲ್ಲಿರುವ ಮರದ ಕೊಂಬೆಗಳನ್ನು ತೆರವುಗೊಳಿಸಲು ಅನುಮತಿ ನೀಡುವಂತಾಗಬೇಕು ಎಂದು ಕೋರಿದರು.


ತಾಪಂ ಇಒ ಶೇಖರ್ ಅವರು ಮಾತನಾಡಿ, ಸೂಕ್ಷ್ಮ ಹಾಗೂ ಪ್ರವಾಹ ಪೀಡಿತ ಪ್ರದೇಶದಲ್ಲಿ ವಾಸಿಸುವ ಸಂತ್ರಸ್ತರಿಗೆ ಆಯಾ ಗ್ರಾಪಂ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಿ, ಮನೆ ನಿರ್ಮಿಸಿಕೊಡಲು ಪ್ರಯತ್ನಗಳು ನಡೆದಿವೆ ಎಂದರು.

ತಹಸೀಲ್ದಾರ್‌ ಶ್ರೀಧರ ಮಾತನಾಡಿ, ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಅಗತ್ಯ ಮುನ್ನೆಚ್ಚರ ವಹಿಸುವ ಬಗ್ಗೆ ಗಮನಹರಿಸಲಾಗಿದೆ ಎಂದರು.

ಪೌರಾಯುಕ್ತ ಎಚ್.ಆರ್. ರಮೇಶ್ ಮಾಹಿತಿ ನೀಡಿ, ಮಡಿಕೇರಿ ನಗರದಲ್ಲಿ ಮಳೆಗಾಲದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗೆ ಮಾಹಿತಿ ನೀಡಿದರು. ತಾಲೂಕು ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಎಂಜಿನಿಯರ್‌ಗಳು, ಪಿಡಿಒಗಳು, ಮಳೆಗಾಲದಲ್ಲಿ ವಹಿಸಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.