ಸಾರಾಂಶ
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನ. 1ರಂದು 18ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಸಮಾರಂಭ ಆಯೋಜಿಸಿದ್ದು, ಇದರ ಭಾಗವಾಗಿ ತಾಲೂಕು ಮಟ್ಟದಲ್ಲಿ ಕುಣಿಯೋಣು ಬಾರಾ ನೃತ್ಯ ಸ್ಪರ್ಧೆ, ರಾಜ್ಯ ಮಟ್ಟದ ನೃತ್ಯ ಕಲಾ ವೈಭವ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಆರ್. ಉಮೇಶ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 17 ವರ್ಷಗಳಿಂದ ಸಂಘದ ಮೂಲಕ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ 18ನೇ ವರ್ಷದ ಸಮಾರಂಭವನ್ನು ನಡೆಸಲಾಗುತ್ತಿದೆ. ಇದರ ಭಾಗವಾಗಿ ನ. 1ರಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.ನ. 1 ರಂದು ಬೆಳಗ್ಗೆ 7.30ಕ್ಕೆ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನೆರವೇರಲಿದೆ. ಆಟೋ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಕನ್ನಡ ಧ್ವಜ ಸ್ಥಂಭದ ಉದ್ಘಾಟನೆ ಮತ್ತು ನಿರಂತರ ಹಾರಾಟದ ಧ್ವಜಾರೋಹಣ ಮಾಡಲಾಗುವುದು. 8 ಗಂಟೆಗೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದು ಎಂದರು.ಅಂದು ಬೆಳಗ್ಗೆ 8.30 ಗಂಟೆಗೆ ಕಕ್ಕೆಹೊಳೆ ಜಂಕ್ಷನ್‌ನಲ್ಲಿರುವ ಬಸವೇಶ್ವರ ಪ್ರತಿಮೆ ಮುಂಭಾಗದಿಂದ ಆಟೋಗಳ ಮೆರವಣಿಗೆ ಅಂಬೇಡ್ಕರ್ ವೃತ್ತದವರೆಗೆ ನಡೆಯಲಿದೆ. ನಂತರ ಜೇಸೀ ವೇದಿಕೆಯಲ್ಲಿ ಸ್ತಬ್ಧಚಿತ್ರಗಳೊಂದಿಗೆ ಆಗಮಿಸುವ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸುವ ತಾತ್ಕಾಲಿಕ ವೇದಿಕೆಯಲ್ಲಿ ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವ ಸಮಾರಂಭದ ಉದ್ಘಾಟನೆ ನಡೆಯಲಿದೆ. ನಂತರ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿಭಾಗದಲ್ಲಿ ತಾಲೂಕು ಮಟ್ಟದ ಕುಣಿಯೋಣು ಬಾರಾ ನೃತ್ಯ ಸ್ಪರ್ಧೆ ಜರುಗಲಿದ್ದು, ವಿಜೇತ ತಂಡಗಳಿಗೆ ಟ್ರೋಫಿ ನೀಡಲಾಗುವುದು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದೆ ಎಂದರು.ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಮಾಜ ಸೇವೆ ಮಾಡಿದ 7 ಮಂದಿ ಸಾಧಕರನ್ನು ಸನ್ಮಾನಿಸಲಾಗುವುದು. ಇದರೊಂದಿಗೆ ರಾಜ್ಯೋತ್ಸವ ಅಂಗವಾಗಿ ಆಟೋ ಚಾಲಕರ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಇದಾದ ನಂತರ ಸಾರ್ವಜನಿಕ ವಿಭಾಗದಲ್ಲಿ ರಾಜ್ಯಮಟ್ಟದ ಹೆಸರಾಂತ ತಂಡಗಳಿಂದ ನೃತ್ಯ ಕಲಾ ವೈಭವ ಸ್ಪರ್ಧೆ ನಡೆಯಲಿದೆ ಎಂದರು.ವಿಜೇತರ ತಂಡಕ್ಕೆ ಪ್ರಥಮ 50 ಸಾವಿರ ನಗದು, ದ್ವಿತೀಯ 25 ಸಾವಿರ, ತೃತೀಯ 15 ಸಾವಿರ ನಗದು ಹಾಗೂ ಟ್ರೋಫಿಗಳನ್ನು ನೀಡಲಾಗುವುದು. ಇದರೊಂದಿಗೆ ಅತ್ಯುತ್ತಮ ತಂಡಕ್ಕೆ ಸೂಪರ್ ಸೆವೆನ್ ಪ್ರಶಸ್ತಿ ಕೊಡಲಾಗುವುದು. ಹೆಚ್ಚಿನ ಮಾಹಿತಿಗೆ ಮೊ: 9449567485, 9591845187 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ವೈ. ಜೀವನ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಬೇಟು, ಸಹ ಕಾರ್ಯದರ್ಶಿ ಫೆಲಿಕ್ಸ್, ಸದಸ್ಯ ಎಸ್. ರವಿಕುಮಾರ್ ಉಪಸ್ಥಿತರಿದ್ದರು.
;Resize=(128,128))
;Resize=(128,128))