ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಆಟೋ ಗ್ಯಾಸ್ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಮೂಲಕ ಹೆಚ್ಚಿನ ಪ್ರಮಾಣದ ಅನಿಲ ಪೂರೈಕೆ ಮಾಡಲಾಗುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.
ಧಾರವಾಡ:
ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿ ಇದ್ದು ಇಂತಹ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬೇಡಿ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ.ಈ ಕುರಿತು ಪ್ರಕಟಣೆ ನೀಡಿರುವ ಇಲಾಖೆ, ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳು. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಕೆಲವು ಖಾಸಗಿ ಆಟೋ ಗ್ಯಾಸ್ ಸರಬರಾಜು ಸಂಸ್ಥೆಗಳಲ್ಲಿ ಮಾತ್ರ ಅಲ್ಪಮಟ್ಟಿನ ಕೊರತೆ ಕಂಡುಬಂದಿದ್ದು, ಇದನ್ನು ಸರಿಪಡಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಮೂಲಕ ಹೆಚ್ಚಿನ ಪ್ರಮಾಣದ ಅನಿಲ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದೆ.ಹಿಂದೆ ಈ ಮೂರು ಸಂಸ್ಥೆಗಳು ಸರಾಸರಿ 56.67 ಮೆಟ್ರಿಕ್ ಟನ್ ಆಟೋ ಗ್ಯಾಸ್ ಸರಬರಾಜು ಮಾಡುತ್ತಿದ್ದವು. ಆದರೆ, ಪ್ರಸ್ತುತ ಬೇಡಿಕೆ ಪೂರೈಸಲು ಸರಬರಾಜು ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಸದ್ಯ ಪ್ರತಿದಿನ ಸರಾಸರಿ 83.58 ಮೆಟ್ರಿಕ್ ಟನ್ ಗ್ಯಾಸ್ ಚಿಲ್ಲರೆ ಮಾರಾಟ ಮಳಿಗೆಗಳಿಗೆ ಪೂರೈಸಲಾಗುತ್ತಿದೆ.
ಏ. 2ರಿಂದ ಏ. 6ರ ವರೆಗಿನ ಅಂಕಿ-ಅಂಶ ಗಮನಿಸಿದರೆ ಪೂರೈಕೆಯಲ್ಲಿ ಸ್ಥಿರತೆ ಇದೆ. ಏ. 2ರಂದು 87.78, ಏ. 3ರಂದು 86.05, ಏ. 4ರಂದು 84.80, ಏ. 5ರಂದು ಗರಿಷ್ಠ 94.11 ಹಾಗೂ ಏ. 6ರಂದು 83.58 ಮೆಟ್ರಿಕ್ ಟನ್ ಅನಿಲವನ್ನು ಈ ಮೂರು ಪ್ರಮುಖ ಸಂಸ್ಥೆಗಳು ಯಶಸ್ವಿಯಾಗಿ ಪೂರೈಕೆ ಮಾಡಿವೆ. ಆದ್ದರಿಂದ, ರಾಜ್ಯದ ಆಟೋ ಮಾಲೀಕರು ಮತ್ತು ಚಾಲಕರು ಯಾವುದೇ ಸುಳ್ಳು ವದಂತಿ ನಂಬಬಾರದು ಮತ್ತು ಆತಂಕಕ್ಕೊಳಗಾಗಿ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲಬಾರದು. ಅನಿಲ ಪೂರೈಕೆ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಇಲಾಖೆಯು ಮನವಿ ಮಾಡಿದೆ.