ಸಾರಾಂಶ
ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಓಆರ್‌ಎಸ್ ಪ್ಯಾಕೇಟ್‌ಗಳನ್ನು ವಿತರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯದ ಕಾಳಜಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಓಆರ್‌ಎಸ್ ಪ್ಯಾಕೇಟ್‌ಗಳನ್ನು ವಿತರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯದ ಕಾಳಜಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶದ ಪ್ರಮಾಣ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಉಷ್ಣತೆಯ ಒತ್ತಡದಿಂದ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ತೀವ್ರ ಜ್ವರ, ಕೈ-ಕಾಲುಗಳು ಹಾಗೂ ಮೊಣಕಾಲುಗಳ ಸೆಳೆತ, ಪ್ರಜ್ಞೆ ತಪ್ಪುವುದು, ಸುಸ್ತು ಉಂಟಾಗುತ್ತದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೂಲಕ ಜನರಲ್ಲಿ ವಿವಿಧೆಡೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ನರೇಗಾದಡಿ ವಿವಿಧೆಡೆ ಕೆಲಸ ಮಾಡುವ ಕೂಲಿ ಕಾರ್ಮಿಕರ ಸ್ಥಳಗಳಿಗೆ ಭೇಟಿ ನೀಡಿ ಆರೋಗ್ಯದ ಸಲಹೆಗಳನ್ನು ತಿಳಿಸಿ ಅವರಿಗೆ ಓಆರ್‌ಎಸ್ ಪ್ಯಾಕೇಟ್‌ಗಳನ್ನು ಸಹ ವಿತರಿಸಲಾಗುತ್ತಿದೆ. ಗ್ರಾಮಗಳಿಗೆ ತೆರಳಿ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೇ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಸ್ಥಾಪಿಸಲಾದ ವಿವಿಧ ಚೆಕ್ ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಆಶಾ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಓಆರ್‌ಎಸ್ ಪಾಕೇಟ್‌ಗಳನ್ನ ವಿತರಿಸುತ್ತಿದ್ದಾರೆ.