ಪರಿಸರ ಸ್ನೇಹಿ ಗಣಪತಿ- ಗೌರಿ ಮೂರ್ತಿ ವಿತರಿಸಿ ಜಾಗೃತಿ

| Published : Aug 26 2025, 01:03 AM IST

ಪರಿಸರ ಸ್ನೇಹಿ ಗಣಪತಿ- ಗೌರಿ ಮೂರ್ತಿ ವಿತರಿಸಿ ಜಾಗೃತಿ
Share this Article
  • FB
  • TW
  • Linkdin
  • Email

ಸಾರಾಂಶ

ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಬೇಕು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಗೌರಿ ಗಣೇಶ ಹಬ್ಬದ ಪ್ರಯುಕ್ತ ರೋಟರಿ ಹಾಗೂ ಅಚೀವರ್ಸ್ ಅಕಾಡೆಮಿಯಿಂದ ಮನೆ ಮನೆಗೆ ತೆರಳಿ ಪರಿಸರಸ್ನೇಹಿ ಗಣಪತಿ ಮೂರ್ತಿ ಹಾಗೂ ಗೌರಿಯನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣಪತಿಯ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಮಂಜುರಾಮ ಮಾತನಾಡಿ, ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಸಬೇಕು ಎಂದರು.

ಸಂಸ್ಥೆ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ.ರಾಘವೇಂದ್ರ ಮಾತನಾಡಿ, ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಬೇಕು ಎಂದು ಸಾರ್ವಜನಿಕರಲ್ಲಿ ಮನವಿನ ಮಾಡಿದರು.

ಈ ವೇಳೆ ರೋಟರಿ ಕ್ಲಬ್ ಕಾರ್ಯದರ್ಶಿ ಎನ್.ನಾಗೇಂದ್ರ, ರೇವಣ್ಣ, ದರ್ಶನ್, ಪುನೀತ್, ಏಕಾಂತ್ ಅಚೀವರ್ಸ್ ಅಕಾಡೆಮಿ ವಿದ್ಯಾರ್ಥಿಗಳು ಹಾಗೂ ಇತರರು ಹಾಜರಿದ್ದರು.

ಪಿಒಪಿ ಗಣೇಶ ಮೂರ್ತಿಗಳ ವಶ; ಕಠಿಣ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಎಚ್ಚರಿಕೆ

ಮದ್ದೂರು:

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಾಲೂಕಿನ ವಿವಿಧೆಡೆ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಮಾರಾಟದ ಬಗ್ಗೆ ಪರಿಶೀಲನೆ ನಡೆಸಿತು.

ಪರಿಶೀಲನೆ ವೇಳೆ ಪತ್ತೆಯಾದ ಮೂರ್ತಿಗಳನ್ನು ಅಧಿಕಾರಿಗಳು ವಶಪಡಿಸಿಕೊಂಡು ಮದ್ದೂರು ನಗರಸಭೆಗೆ ಹಸ್ತಾಂತರಿಸಲಾಯಿತು.

ಪರಿಸರಕ್ಕೆ ಹಾನಿಕಾರಕವಾಗಿರುವ ಕಾರಣ ಪಿಒಪಿ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿ ಪಿಒಪಿ ಮೂರ್ತಿಗಳನ್ನು ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಎಚ್ಚರಿಕೆ ನೀಡಿದ್ದಾರೆ

ಗಣೇಶ ಚತುರ್ಥಿಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಿ, ಇದು ಪರಿಸರ ಸ್ನೇಹಿ, ನೀರಿನ ಮಾಲಿನ್ಯವನ್ನು ತಡೆಯುವಲ್ಲಿ ಸಹಕಾರಿ ಹಾಗೂ ಮುಂದಿನ ಪೀಳಿಗೆಗೆ ಶುದ್ಧ ಪರಿಸರ ನೀಡುವ ಮಾರ್ಗವಾಗಿದೆ. ಎಲ್ಲರು ಇದಕ್ಕೆ ಸಹಕಾರನೀಡುವಂತೆ ಮನವಿ ಮಾಡಿದ್ದಾರೆ.