ವಿದ್ಯಾರ್ಥಿಗಳಲ್ಲಿ ಓದಿನ ಒತ್ತಡ, ಆಸಕ್ತಿ ಕುಂಠಿತವಾಗುವುದು, ಕೋಪ, ಆತಂಕ ಹಾಗೂ ಖಿನ್ನತೆ ಮುಂತಾದ ಸಮಸ್ಯೆಗಳು ಕಂಡುಬರುವ ಸಾಧ್ಯತೆ ಇದ್ದು, ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಬೆಂಬಲ ನೀಡಬೇಕು ಎಂದು ಕಿವಿಮಾತು ಹೇಳಿದರು.

ಕನ್ನಡಪ್ರಭವಾರ್ತೆ, ಹಾಸನ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ, ಖಿನ್ನತೆ ಹಾಗೂ ಆತಂಕದ ಸಮಸ್ಯೆಗಳು ಹೆಚ್ಚುತ್ತಿದ್ದು, ಅವುಗಳನ್ನು ನಿರ್ಲಕ್ಷ್ಯ ಮಾಡದೆ ಸೂಕ್ತ ಸಮಾಲೋಚನೆ ಮತ್ತು ಮಾರ್ಗದರ್ಶನ ಪಡೆಯುವುದು ಅತ್ಯಗತ್ಯ ಎಂದು ಹಾಸನದ ಆಶ್ರಯ ಕ್ಲಿನಿಕ್‌ನ ಸೈಕಿಯಾಟ್ರಿಕ್ ಕೌನ್ಸಿಲರ್ ಡಾ. ನಿರುಪಮಾ ಕಿರಣ್ ಸಲಹೆ ನೀಡಿದರು.

ನಗರದ ಹಾರನಹಳ್ಳಿ ರಾಮಸ್ವಾಮಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿ,

ವಿದ್ಯಾರ್ಥಿಗಳಲ್ಲಿ ಓದಿನ ಒತ್ತಡ, ಆಸಕ್ತಿ ಕುಂಠಿತವಾಗುವುದು, ಕೋಪ, ಆತಂಕ ಹಾಗೂ ಖಿನ್ನತೆ ಮುಂತಾದ ಸಮಸ್ಯೆಗಳು ಕಂಡುಬರುವ ಸಾಧ್ಯತೆ ಇದ್ದು, ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಬೆಂಬಲ ನೀಡಬೇಕು ಎಂದು ಕಿವಿಮಾತು ಹೇಳಿದರು. ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಸಾಕಷ್ಟು ನಿದ್ದೆ, ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಸೇವನೆ ಹಾಗೂ ಆಟೋಟ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಕೋಪವನ್ನು ನಿಯಂತ್ರಿಸಿ, ಒತ್ತಡವನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸಆರೋಗ್ಯವೇ ಭಾಗ್ಯ ಎಂಬ ಸಂದೇಶದ ಮೂಲಕ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಹಾರನಹಳ್ಳಿ ರಾಮಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ಪುನಿತಾ ಹೆನ್ರಿ ಮತ್ತು ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.