ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ಎಲ್ಲರೂ ಕಾರ್ಯನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ನಿರಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜತೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿ ಮೋಹನ್ ರೆಡ್ಡಿ ತಿಳಿಸಿದರು.ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಬೆಳಗಾವಿ ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪ್ರತಿ ಮಕ್ಕಳ ಕುರಿತು ಮಾಹಿತಿ ಇರುತ್ತದೆ. ಬಡತನದಿಂದ ಶಿಕ್ಷಣ ವಂಚಿತರಾಗುತ್ತಿರುವ ಮಕ್ಕಳನ್ನು ಗುರುತಿಸಬೇಕು. ಗ್ರಾಮೀಣ ಭಾಗದಲ್ಲಿ ಶಿಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿ ಪ್ರತಿಯೊಬ್ಬರೂ ಮಕ್ಕಳನ್ನು ಗುರುತಿಸಿ ರಕ್ಷಿಸಬೇಕು ಎಂದು ಪಿ.ಮುರಳಿ ಮೋಹನ್ ರೆಡ್ಡಿ ಅವರು ತಿಳಿಸಿದರು.
ಕಾರ್ಮಿಕ ಇಲಾಖೆ ಉಪ ಆಯುಕ್ತ ನಾಗೇಶ್ ಡಿ.ಜಿ. ಮಾತನಾಡಿ, ಬಾಲಕಾರ್ಮಿಕರು ತಮ್ಮ ಹಕ್ಕುಗಳು ಇಲ್ಲದೆ ತಮ್ಮ ಜೀವನದ ಮೌಲ್ಯವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದಿದ್ದಾರೆ. ಅವೆಲ್ಲವನ್ನೂ ತಡೆಗಟ್ಟುವ ನಿಟ್ಟಿನಲ್ಲಿ ಈ ದಿನ ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.ಭಾರತದಲ್ಲಿ ಸಾಕಷ್ಟು ಮಕ್ಕಳು ಶಿಕ್ಷ ಣದ ಹಕ್ಕು, ಆರೋಗ್ಯ ಮತ್ತು ಮೂಲಭೂತ ಸ್ವಾತಂತ್ರ್ಯಗಳನ್ನು ಪಡೆಯಲು ವಂಚಿತರಾಗಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಮಕ್ಕಳಲ್ಲಿ, ಅರ್ಧಕ್ಕಿಂತ ಹೆಚ್ಚು ಬಾಲಕಾರ್ಮಿಕರು ಕಾನೂನುಬಾಹಿರ ಚಟುವಟಿಕೆಗಳಿಗೆ ತೊಡಗಿಕೊಳ್ಳುತ್ತಿದ್ದಾರೆ. ಅಪಾಯಕಾರಿ ಪರಿಸರದಲ್ಲಿ ಕೆಲಸ, ಗುಲಾಮಗಿರಿ ಅಥವಾ ಬಲವಂತವಾಗಿ ಕೆಲಸ ಮಾಡುತ್ತಾರೆ. ಜೊತೆಗೆ ವೇಶ್ಯಾವಾಟಿಕೆ, ಮಾದಕವಸ್ತು ಕಳ್ಳಸಾಗಣೆ ಮತ್ತು ಸಶಸ್ತ್ರ ಸಂಘರ್ಷಕ್ಕೆ ಬಲಿಯಾಗುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿರುವ ಮಕ್ಕಳು ಕಂಡು ಬಂದಲ್ಲಿ ತಕ್ಷಣ ರಕ್ಷಣೆ ಮಾಡಲಾಗುತ್ತಿದೆ. ಇದರ ನಿರ್ಮೂಲನೆಗೆ ಎಲ್ಲ ಇಲಾಖೆಗಳು, ಸಾರ್ವಜನಿಕರು ಸೇರಿ ಎಲ್ಲರೂ ಕೈ ಜೋಡಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಮಕ್ಕಳನ್ನು ಗುರುತಿಸಿ ರಕ್ಷಣೆ ಮಾಡಲಾಗುತ್ತಿದೆ. ಆದರೆ ಇನ್ನಷ್ಟು ಜಾಗೃತಿ ಕಾರ್ಯಕ್ರಮಗಳು ಅಗತ್ಯವಿದೆ ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ನ್ಯಾ. ಪಿ.ಮುರಳಿ ಮೋಹನ್ ರೆಡ್ಡಿ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಎಂ.ಬಿ.ಅನ್ಸಾರಿ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನಕುಮಾರ ಹಂಚಾಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನವೀನ ಶಿಂತ್ರೆ, ಹಿಂದುಳಿದ ವರ್ಗಗಳ ಇಲಾಖೆಯ ಶಿವಪ್ರಿಯಾ ಕಡೆಚೂರ, ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹಾಂತೇಶ ಭಜಂತ್ರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಬೆಳಗಾವಿ ಕಾರ್ಮಿಕ ಅಧಿಕಾರಿ ಮಲ್ಲಿಕಾರ್ಜುನ ಜೋಗುರು, ತರುನ್ನಂ ಬೆಂಗಾಲಿ, ಮಹಿಳಾ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂದರ್ ಮೇರಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್ ಕಿವುಡಸಣ್ಣವರ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು. ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಬಾಲಕಾರ್ಮಿಕರ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ ನಿರೂಪಿಸಿ, ವಂದಿಸಿದರು.
-----------------ಕೋ್ಟ್
ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಭವಿಷ್ಯದಲ್ಲಿ ಭಾರತ ಎಲ್ಲ ಕ್ಷೇತ್ರಗಳಲ್ಲಿ ಪ್ರಬಲರಾಗಲು ಮಕ್ಕಳು ಮುಂದೆ ಉತ್ತಮ ಪ್ರಜೆಗಳಾಗಬೇಕು. ಈ ಜವಾಬ್ದಾರಿ ಎಲ್ಲರ ಮೇಲಿದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು, ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಸಾರ್ವಜನಿಕವಾಗಿ ಹೆಚ್ಚಿನ ಜಾಗೃತಿ ಅಗತ್ಯ.- ಪಿ.ಮುರಳಿ ಮೋಹನ್ ರೆಡ್ಡಿ, ಹಿರಿಯ ಸಿವಿಲ್ ನ್ಯಾಯಾಧೀಶ