ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಕೇವಲ ಕಾನೂನಿನ ಜವಾಬ್ದಾರಿಯಲ್ಲ. ಅದು ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹೊಣೆಗಾರಿಕೆಯಾಗಿದೆ.

ಕನ್ನಡಪ್ರಭ ವಾರ್ತೆ ಹೊಸಪೇಟೆ

ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಕೇವಲ ಕಾನೂನಿನ ಜವಾಬ್ದಾರಿಯಲ್ಲ. ಅದು ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಮಹಿಳೆಯರ ಹಕ್ಕು, ಸ್ವಾತಂತ್ರ‍್ಯ ಮತ್ತು ಘನತೆ ಗೌರವಿಸುವ ಮನೋಭಾವ ಸಮಾಜದ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಅಪರ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶೆ ಶೃತಿ ತೇಲಿ ಹೇಳಿದರು.

ನಗರದ ತಹಸೀಲ್ದಾರ ಕಚೇರಿ ಸಭಾಂಗಭಣದಲ್ಲಿ ಹಮ್ಮಿಕೊಂಡಿದ್ದ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆ ಅಂತಾರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿ ವರ್ಷ ನ.25ರಂದು ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ದಿನ ಆಚರಿಸಲಾಗುತ್ತದೆ. ಮಹಿಳೆಯರು ಮತ್ತು ಹೆಣ್ಣು ಮಕ್ಕಳ ವಿರುದ್ಧ ನಡೆಯುವ ದೈಹಿಕ, ಮಾನಸಿಕ, ಲೈಂಗಿಕ ಹಾಗೂ ಆರ್ಥಿಕ ದೌರ್ಜನ್ಯ ವಿರುದ್ಧ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಮಹಿಳಾ ಹಿಂಸಾಚಾರವು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಇಂತಹ ಕೃತ್ಯ ತಡೆಗಟ್ಟಲು ಸಮಾಜದಲ್ಲಿ ಸಮಾನತೆ, ಪರಸ್ಪರ ಗೌರವ ಮತ್ತು ಮಾನವೀಯ ಮೌಲ್ಯ ಬೆಳೆಸುವುದು ಅಗತ್ಯವಾಗಿದೆ ಎಂದರು.

ಕೌಟುಂಬಿಕ ಕಿರುಕುಳ, ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ, ಕರ್ತವ್ಯ ಸ್ಥಳದಲ್ಲಿ ಲೈಂಗಿಕ ಕಿರುಕುಳ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಮಾನಸಿಕ ದೌರ್ಜನ್ಯವೂ ಮಹಿಳೆಯರ ಸ್ವಾತಂತ್ರ‍್ಯ ಮತ್ತು ಆತ್ಮಗೌರವಕ್ಕೆ ಧಕ್ಕೆ ಉಂಟುಮಾಡುತ್ತಿವೆ. ಇಂತಹ ಘಟನೆ ನಿರ್ಲಕ್ಷಿಸದೆ ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಬೆಂಬಲ ಮತ್ತು ಕಾನೂನಿನ ನೆರವು ಒದಗಿಸಬೇಕು ಎಂದು ತಿಳಿಸಿದರು.

ಮಹಿಳೆಯರ ರಕ್ಷಣೆಗಾಗಿ ಹಲವು ಕಾಯ್ದೆ, ಕಾನೂನು ಜಾರಿಯಲ್ಲಿವೆ, ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು. ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದು ಎಂದು ತಿಳಿಸಿದ ಅವರು, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಕುಟುಂಬದಿಂದಲೇ ಜಾಗೃತಿ ಆರಂಭವಾಗಬೇಕು. ಹೆಣ್ಣುಮಕ್ಕಳಿಗೆ ಶಿಕ್ಷಣ, ಸ್ವಾವಲಂಬನೆ ಮತ್ತು ಆತ್ಮರಕ್ಷಣೆಯ ಅರಿವು ಮೂಡಿಸುವುದರ ಜತೆಗೆ ಮಹಿಳೆಯರನ್ನು ಗೌರವದಿಂದ ಕಾಣುವ ಸಂಸ್ಕೃತಿ ಬೆಳೆಸಬೇಕು. ದೌರ್ಜನ್ಯಕ್ಕೆ ಒಳಗಾದವರನ್ನು ದೂಷಿಸುವ ಬದಲು ಅವರಿಗೆ ಧೈರ್ಯ ತುಂಬಿ ನ್ಯಾಯ ದೊರಕಿಸಿಕೊಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಮೇಘನಾ, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣದೇವರಾಯಲು, ಆರೋಗ್ಯ ಇಲಾಖೆಯ ಎಂ.ಪಿ. ದೊಡ್ಡಮನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.