ನಾಗರಿಕ ಹಕ್ಕುಗಳ ಸಂರಕ್ಷಣೆ, ಜಾತಿ ತಾರತಮ್ಯ ನಿರ್ಮೂಲನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಹಾಗೂ ಕಮ್ಮಟ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ
ಕನ್ನಡಪ್ರಭ ವಾರ್ತೆ ಹಾವೇರಿನಾಗರಿಕ ಹಕ್ಕುಗಳ ಸಂರಕ್ಷಣೆ, ಜಾತಿ ತಾರತಮ್ಯ ನಿರ್ಮೂಲನೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾಗರಾಜ್ ಎಲ್. ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ-1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ-1989 ಹಾಗೂ ನಿಯಮಗಳು ಮತ್ತು ವಿವಿಧ ಇಲಾಖೆಗಳ ಸೌಲಭ್ಯಗಳ ಕುರಿತು ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಹಾಗೂ ಕಮ್ಮಟ ಉದ್ಘಾಟಿಸಿ, ಡಾ.ಬಿ.ಆರ್.ಅಂಬೇಡ್ಕರ, ಡಾ.ಬಾಬು ಜಗಜೀವನರಾಂ ಹಾಗೂ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.ನಾಗರಿಕ ಹಕ್ಕುಗಳು ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೀಮಿತವಾಗಿಲ್ಲ, ದೇಶದ ಪ್ರತಿಯೊಬ್ಬ ನಾಗರಿಕನಿಗೂ ತನ್ನ ಹಕ್ಕುಗಳ ಅರಿವಿನ ಜೊತೆಗೆ ಕರ್ತವ್ಯಗಳ ತಿಳಿವಳಿಕೆ ಇರಬೇಕು. ಹಕ್ಕುಗಳ ಬಗ್ಗೆ ಮಾತನಾಡುವ ನಾವು ಕರ್ತವ್ಯಗಳನ್ನೂ ಸಮಾನ ಜವಾಬ್ದಾರಿಯಿಂದ ನಿರ್ವಹಿಸಬೇಕು. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಸಾರುತ್ತದೆ ಈ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನ ಅವಕಾಶ ಹಾಗೂ ಹಕ್ಕುಗಳನ್ನು ಒದಗಿಸಿದೆ ಶಿಕ್ಷಣ, ಉದ್ಯೋಗ, ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಎಲ್ಲರೂ ಸಮಾನ ಅವಕಾಶಗಳನ್ನು ಪಡೆಯುವಂತಾಗಬೇಕು. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವುದಷ್ಟೇ ಅಲ್ಲ ಅದನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು. ಸಮಾಜದಲ್ಲಿ ಸಮಾನತೆ ಹಾಗೂ ಸಾಮರಸ್ಯ ಮೂಡಿಸಲು ಯುವಜನರು ವಿಶೇಷವಾಗಿ ಮುಂದಾಗಬೇಕು ಎಂದರು.ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಹಿರಿಯ ಬೋಧಕ ಡಾ. ಅಬ್ದುಲ್ ವಹಾಬ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಹಾಗೂ ಸಂಬಂಧಿತ ನಿಯಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಂಜನಾಯ್ಕ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಉಪಾಧೀಕ್ಷಕ ರಮೇಶಕುಮಾರ ಎಚ್.ವಿ., ಹಾವೇರಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರ ಹುಬ್ಬಳ್ಳಿ, ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಸಂಜಯಗಾಂಧಿ ಸಂಜೀವಣ್ಣನವರ, ಎನ್.ಎಂ.ಗಾಳೆಮ್ಮನವರ, ಜಗದೀಶ ಹರಿಜನ, ರಮೇಶ ಕೊರವರ, ಅಜ್ಜಪ್ಪ, ಮಂಜುನಾಥ ಪಾಟೀಲ, ವಿವಿಧ ಇಲಾಖೆಗಳ ಅಧಿಕಾರಿಗಳು, ಯಲ್ಲಪ್ಪ ದೇವಗಿರಿ, ಸಮಾಜದ ಮುಖಂಡರು, ಮುತ್ತುರಾಜ ಮಾದರ ಇತರರು ಉಪಸ್ಥಿತರಿದ್ದರು.