ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ಸಮಾಜದಲ್ಲಿ ಎಲ್ಲರಿಗೂ ಭಾರತ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರತಿ ಗ್ರಾಮಪಂಚಾಯತಿಗಳಲ್ಲಿಯೂ ಜ.26 ರಿಂದ ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತಿಗಳಲ್ಲಿ ಸ್ತಬ್ಧಚಿತ್ರ ವಾಹನದ ಮೂಲಕ ಮೆರವಣಿಗೆ ನಡೆಸಿ ಜನರಿಗೆ ಸಂವಿಧಾನ ಪರಿಕಲ್ಪನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ಜಾಥಾ ಕಾರ್ಯಕ್ರಮದ ಸ್ತಬ್ಧಚಿತ್ರ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರು ಜ.26ರಂದು ಚಾಲನೆ ನೀಡಲಿದ್ದಾರೆ. ಸಂವಿಧಾನದ ಮಹತ್ವ, ಆಶಯ, ಸಮಾನತೆಯ ತತ್ವಗಳ ಬಗ್ಗೆ ಜನಸಾಮಾನ್ಯರು ಅರಿವು ಹೊಂದಿರಬೇಕು. ಈ ನಿಟ್ಟಿನಲ್ಲಿ ಜನವರಿ 26 ರಿಂದ ಫೆಬ್ರವರಿ 23ರವರೆಗೆ ಜಿಲ್ಲೆಯ ಎಲ್ಲಾ ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯತಿ ಹಾಗೂ 330 ಗ್ರಾಮಪಂಚಾಯತಿಗಳಿಗೆ ಜಾಗೃತಿ ಜಾಥಾ ಸಂಚರಿಸಿ ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದೆ. ಜಾಗೃತಿ ಜಾಥಾ ಅಭಿಯಾನವು ಗ್ರಾಮಪಂಚಾಯತಿ ಕೇಂದ್ರಸ್ಥಾನಕ್ಕೆ ತಲುಪಿದಾಗ ಸ್ಥಳೀಯ ಗ್ರಾಮಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮಾಜಿ ಸದಸ್ಯರು, ಶಾಸಕರು, ಎಲ್ಲಾ ಜನಪ್ರತಿನಿಧಿಗಳು, ಹೋರಾಟಗಾರರು, ನಾಗರಿಕರು, ಸಂಘಟನೆಗಳು, ಕಲಾವಿದರು, ಮಹಿಳೆಯರು ಪಾಲ್ಗೊಳ್ಳುವಂತೆ ಮುಂಚಿತವಾಗಿ ಮಾಹಿತಿ ನೀಡಬೇಕೆಂದು ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಯಾವುದೇ ಆಕ್ಷೇಪಣೆ ಮತ್ತು ಗೊಂದಲಗಳಿಗೆ ಅವಕಾಶ ನೀಡಬಾರದು. ಗ್ರಾಮಪಂಚಾಯತಿ ವ್ಯಾಪ್ತಿಯ ಸ್ಥಳೀಯ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಂಡು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಂವಿಧಾನವು ಸರ್ವರಿಗೂ ಸಮಪಾಲು-ಸರ್ವರಿಗೂ ಸಮಬಾಳು ಎನ್ನುವಂತೆ ಪ್ರತಿಯೊಬ್ಬರಿಗೂ ಸಮಾನತೆ, ಬ್ರಾತೃತ್ವ, ಸ್ವಾತಂತ್ರ್ಯದಿಂದ ಬದುಕಲು ಹಕ್ಕು ಮತ್ತು ಕರ್ತವ್ಯಗಳನ್ನು ಸಮಾನವಾಗಿ ನೀಡಿರುವ ಕಾರಣ ಯಾವುದೇ ಜಾತಿ-ಧರ್ಮ ಭೇದವಿಲ್ಲದಂತೆ ಸಮಾನತೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕ್ರಮವಹಿಸಬೇಕೆಂದು ಸೂಚಿಸಿದರು.ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಾಗೃತಿ ಜಾಥಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮಪಂಚಾಯತಿ ಮಟ್ಟದಲ್ಲಿ ವಿಶೇಷ ಸಭೆ ನಡೆಸಿ, ಸಾರ್ವಜನಿಕರ ಗಮನಕ್ಕೆ ತರಬೇಕು. ಪ್ರತಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಬ್ಯಾನರ್, ಪೋಸ್ಟರ್‌ಗಳನ್ನು ಅಳವಡಿಸಬೇಕು. ಕಸ ವಿಲೇವಾರಿ ಮಾಡುವ ವಾಹನಗಳಲ್ಲಿ ಜಾಗೃತಿ ಜಾಥಾ ಅಭಿಯಾನವು ಗ್ರಾಮಪಂಚಾಯತಿಗೆ ಆಗಮಿಸುವ ದಿನದ ಬಗ್ಗೆ ಧ್ವನಿ ಮುದ್ರಿಕೆ ಮೂಲಕ ಜನರಿಗೆ ಮಾಹಿತಿ ನೀಡಬೇಕು. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಸಂವಿಧಾನದ ಬಗ್ಗೆ ಅರಿಯಲು ಸಾಧ್ಯವಾಗುತ್ತದೆ. ಸಂವಿಧಾನ ಜಾಗೃತಿ ಜಾಥಾ ಅಭಿಯಾನವು ಗ್ರಾಮಪಂಚಾಯತಿಗೆ ಭೇಟಿ ನೀಡಿದಾಗ ಪಂಚಾಯತಿ ಅಧಿಕಾರಿ/ನೌಕರರು ಅತ್ಯಂತ ಗೌರವ ಮತ್ತು ಪ್ರೀತಿಯಿಂದ ಬರಮಾಡಿಕೊಳ್ಳಬೇಕು. ಸಿದ್ಧಪಡಿಸಿರುವ ಮಾರ್ಗ ನಕ್ಷೆಯಂತೆ ಮುಂದಿನ ಗ್ರಾಮ ಪಂಚಾಯತಿಗೆ ಗೌರವ ಮತ್ತು ಮನ್ನಣೆಯಿಂದ ಬೀಳ್ಕೊಡಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತರಾದ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ತಹಸೀಲ್ದಾರ್ ಸಿದ್ದೇಶ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜಿನಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.