ಸಾರ್ವಜನಿಕರಿಗೆ ಕಾಯ್ದೆಗಳ ಅರಿವು ಅತ್ಯಗತ್ಯ: ಮಂಜುನಾಥ ನಾಯಕ್

| Published : Sep 10 2024, 01:34 AM IST

ಸಾರ್ವಜನಿಕರಿಗೆ ಕಾಯ್ದೆಗಳ ಅರಿವು ಅತ್ಯಗತ್ಯ: ಮಂಜುನಾಥ ನಾಯಕ್
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗದಲ್ಲಿ ಪೋಕ್ಸೋ ಕಾಯ್ದೆ-2012 ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಅನುಷ್ಠಾನದ ಕುರಿತು ಕಾರ್ಯಾಗಾರ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸರ್ಕಾರಗಳು ಜನಹಿತಕ್ಕಾಗಿ ಕಾಲಕಾಲಕ್ಕೆ ರೂಪಿಸಿ ಅನುಷ್ಠಾನಗೊಳಿಸುವ ಕಾಯ್ದೆ-ಕಾನೂನುಗಳ ಸಾಮಾನ್ಯ ಜ್ಞಾನ ಜನ ಸಾಮಾನ್ಯರಿಗೆ ಇರಬೇಕಾದುದು ಇಂದಿನ ತುರ್ತು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಅವರು ಹೇಳಿದರು.

ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಪೋಕ್ಸೋ ಕಾಯ್ದೆ - 2012 ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಅನುಷ್ಠಾನದ ಕುರಿತು ಜಿಲ್ಲೆಯ ಎಲ್ಲಾ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿ ಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಆರೋಪಿತನಿಗೆ ಶಿಕ್ಷೆ ನೀಡುವುದರಿಂದ, ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸುವುದರಿಂದ ಅಪರಾಧ ಪ್ರಕರಣ ಗಳನ್ನು ನಿಯಂತ್ರಿಸಲು ಸಾಧ್ಯವಾಗಲಿದೆ. ಈವರೆಗೆ ಅನುಷ್ಠಾನಗೊಂಡ ಕಾಯ್ದೆಗಳು ಸದ್ಬಳಕೆಯಾಗುವಂತೆ ಹಾಗೂ ಅವುಗಳು ಯಾವುದೇ ಅನುಕೂಲಕ್ಕಾಗಿ ದುರುಪಯೋಗವಾಗದಂತೆಯೂ ತಡೆಯುವ ಅವಶ್ಯಕತೆ ಇದೆ ಎಂದು ಹೇಳಿದರು.

ಕೆಲವು ಸಂದರ್ಭಗಳಲ್ಲಿ ನಮ್ಮ ಸುತ್ತಮುತ್ತಲ ಪರಿಸರ, ಕೌಟುಂಬಿಕ ವಾತಾವರಣವೂ ಸಹ ಪೊಕ್ಸೋ ಪ್ರಕರಣಕ್ಕೆ ಕಾರಣ ವಾಗಿರಬಹುದು. ಸ್ನೇಹ-ಸಂಬಂಧಗಳು ಅದರ ಎಲ್ಲೆ ಮೀರದಂತಿರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸಬೇಕು. ಈ ಮಹತ್ವದ ಕಾಯ್ದೆಗಳ ತರಬೇತಿ ಪಡೆದ ಶಿಕ್ಷಕರು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಗೊಳಪಡುವ ಸಾರ್ವಜನಿಕರೊಂದಿಗೆ ಈ ಕಾಯ್ದೆಗಳ ಕುರಿತು ಮಾಹಿತಿ ನೀಡಬೇಕು. ವಿಶೇಷವಾಗಿ ವಿದ್ಯಾರ್ಥಿ ವಲಯದಲ್ಲಿ ಈ ಕಾಯ್ದೆಗಳ ಅರಿವು ಮೂಡಿಸುವ ಅಗತ್ಯವಿದೆ ಎಂದವರು ನುಡಿದರು.

ಜಿಲ್ಲೆಯಲ್ಲಿ ಅತ್ಯಂತ ಹೆಚ್ಚಿನ ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು, ಮಹಿಳೆಯರು ಶೋಷಣೆಗೆ ಒಳಗಾಗುತ್ತಿರು ವುದು ಅತ್ಯಂತ ನೋವಿನ ಸಂಗತಿ. ಜವಾಬ್ದಾರಿಯುತ ಅಧಿಕಾರಿಗಳು ಇರುವ ಕಾನೂನುಗಳ ವ್ಯವಸ್ಥಿತ ಅನುಷ್ಠಾನದಿಂದ ಪ್ರಕರಣಗಳ ದಾಖಲಾತಿಯಲ್ಲಿ ನಿಯಂತ್ರಣ ಸಾಧ್ಯವಾಗಲಿದೆ. ಬಾಲ್ಯವಿವಾಹ ಇಂದಿಗೂ ಪ್ರಚಲಿತದಲ್ಲಿರುವುದು ಸಾಮಾಜಿಕ ದುರಂತ ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಸಂತೋಷ್ ಎಂ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬುದ್ಧಿಜೀವಿಗಳ ಪ್ರದೇಶ ಎಂದೇ ಖ್ಯಾತವಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿಯೂ ಫೋಕ್ಸೋ ಮತ್ತು ಬಾಲ್ಯವಿವಾಹದಂತಹ ಪ್ರಕರಣಗಳು ಮತ್ತೆ ಮತ್ತೆ ದಾಖಲಾಗುತ್ತಿರುವುದು ಅತ್ಯಂತ ವಿಷಾದದ ಸಂಗತಿಯಾಗಿದೆ. ಇವುಗಳ ನಿಯಂತ್ರಣಕ್ಕಾಗಿ ಜವಾಬ್ದಾರಿಯುತ ಹುದ್ದೆಗಳನ್ನು ಅಲಂಕರಿಸುವ ಅಧಿಕಾರಿ - ನೌಕರರು ಜನಸಾಮಾನ್ಯರಿಗೆ ಕಾನೂನಿನ ಅರಿವು ಮೂಡಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಮನವಿ ಮಾಡಿದ ಅವರು, ಸಮಾಜ ಸುಧಾರಣೆಯೇ ಕಾನೂನಿನ ಅಂತಿಮ ಉದ್ಧೇಶವಾಗಿದೆ ಎಂದರು.

ಕಾರ್ಯಾಗಾರದಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಕುರಿತು ಆಹ್ವಾನಿತ ವಿಷಯತಜ್ಞರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಜಿ.ಆರ್.ರಾಘವೇಂದ್ರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ಶಾಲಾ ಶಿಕ್ಷಣ ಇಲಾಖೆಯ ನಾಗರತ್ನಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್.ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.