ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಮಾನವ ಜೀವ ಅತ್ಯಂತ ಅಮೂಲ್ಯವಾದದ್ದು. ಅಪಘಾತದಿಂದಾಗುವ ಜೀವ ಹಾನಿ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ತಿಳಿವಳಿಕೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಅಪಘಾತ ತಡೆಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಅಪಘಾತ ತಡೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಪ್ರಯಾಣಿಕರು ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳ ಅರಿವು ಹೊಂದುವುದು ಅತ್ಯವಶ್ಯಕ. ಅಧಿಕಾರಿಗಳು ಈ ಕುರಿತು ಸಾರ್ವಜನಿಕರಲ್ಲಿ ಸೂಕ್ತ ತಿಳಿವಳಿಕೆ ಮೂಡಿಸಬೇಕು ಎಂದರು.ಜಿಲ್ಲೆಯಲ್ಲಿ ಅಪಘಾತಗಳು ಸಂಭವಿಸುವ ಅಪಘಾತ ವಲಯಗಳನ್ನು ಗುರುತಿಸಿ, ಇಂತಹ ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಪಘಾತ ಸಂಭವಿಸುವ ರಸ್ತೆಗಳಲ್ಲಿ ಸಂಚಾರಿ ಚಿಹ್ನೆ, ಅಗತ್ಯವಿದ್ದಲ್ಲಿ ರಸ್ತೆ ಗುರುತು ಫಲಕಗಳನ್ನು ಅಳವಡಿಸಬೇಕು. ಅವಶ್ಯವಿದ್ದ ಕಡೆ ಬ್ಯಾರಿಕೇಡ್ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮ ವಹಿಸಬೇಕು. ಜತೆಗೆ ರಸ್ತೆ ನಿಯಮಗಳ ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ನಿಗಾ ಇರಿಸಬೇಕು ಎಂದು ಸೂಚಿಸಿದರು.ಜಿಲ್ಲೆಯಾದ್ಯಂತ ಅಪಘಾತ ಪ್ರಮಾಣ ತಡೆಗೆ ರಸ್ತೆ ಸಂಚಾರ ನಿಯಮಗಳನ್ನು ಪಾಲಿಸುವಂತೆ ಪ್ರಯಾಣಿಕರಿಗೆ ತಿಳಿ ಹೇಳಿ, ಸೂಕ್ತ ಅರಿವು ಮೂಡಿಸಬೇಕು. ರಸ್ತೆ ಅಪಘಾತ ತಡೆಗೆ ಸೂಕ್ತ ಯೋಜನೆ ರೂಪಿಸಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲೆಯಲ್ಲಿ ಸಂಭವಿಸುವ ಅಪಘಾತ ಸ್ಥಳಗಳನ್ನು ಗುರುತಿಸಿ, ಪರಿಶೀಲನೆ ನಡೆಸಿ, ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಸಮಗ್ರ ಅಧ್ಯಯನ ನಡೆಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಾದ ಕುರಿತು ವರದಿ ನೀಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ನಗರದ ವ್ಯಾಪ್ತಿಯಲ್ಲಿನ ವಿಜಯಪುರ-ಸಿಂದಗಿ ರಸ್ತೆಯ ಮೇಲೆ ಬರುವ ಅಂಬೇಡ್ಕರ್ ವೃತ್ತದಲ್ಲಿ ಅಪಘಾತ ತಪ್ಪಿಸಲು ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಅಪಘಾತ ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕು. ಅಗತ್ಯ ಇರುವ ಕಡೆ ಸೈನ್‌ಬೋರ್ಡ್, ರಸ್ತೆ ಸ್ಟಡ್ಸ್‌ಗಳನ್ನು ಅಳವಡಿಸಬೇಕು. ವಿಜಯಪುರ ಮನಗೂಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮನಗೂಳಿ ಉತ್ನಾಳ ಕ್ರಾಸ್ ಅಪಘಾತ ಸಂಭವಿಸುವ ಕುರಿತು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕನಕದಾಸ ವೃತ್ತ ಹಾಗೂ ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ಅಪಘಾತ ಸಂಭವಿಸುವುದರಿಂದ ಈ ಕುರಿತು ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಬೇಕು. ಮುಂದಿನ ಸಭೆಯೊಳಗಾಗಿ ಪರಿಹಾರ ಕ್ರಮ ವಹಿಸಬೇಕು. ಲೋಕೋಪಯೋಗಿ ಇಲಾಖೆ, ಪ್ರಾದೇಶಿಕ ಸಾರಿಗೆ ಅಧಿಕಾರಿ, ಪಾಲಿಕೆ ಅಧಿಕಾರಿಗಳು ಸಂಚಾರ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಪರಿಶೀಲಿಸುವಂತೆ ಸೂಚಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಈಗಾಗಲೇ ಕೊಲ್ಹಾರ ಸೇತುವೆ ಮೇಲೆ ವಿದ್ಯುತ್ ವ್ಯವಸ್ಥೆ ಕಲ್ಪಿಸುವ ಕಾರ್ಯ ಮುಗಿದಿದ್ದು, ಒಟ್ಟಾರೆ ನಾಲ್ಕು ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ಸೋಲಾಪುರ ಮತ್ತು ಬಾಗಲಕೋಟೆ 137 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್ದ 12 ಸ್ಥಳಗಳನ್ನು ಗುರುತಿಸಲಾಗಿದ್ದು, ಗುರುತಿಸಲಾದ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಗೆ ಸಿಸಿಟಿವಿ ಕ್ಯಾಮೆರಾ ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದ ಅವರು, ಇದರಿಂದ ರಸ್ತೆ ಅಪಘಾತ ತಡೆಗೆ ಸಹಕಾರಿಯಾಗಲಿದೆ. ಈ ಕಾರ್ಯವನ್ನು ಆದ್ಯತೆ ಮೇಲೆ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ ಬಾಬಾ ಮುದ್ದೇಬಿಹಾಳ, ಅಬಕಾರಿ ಉಪ ಆಯುಕ್ತ ಮುರಳೀಧರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್‌ಕುಮಾರ ಗುಣಾರಿ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))