ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

| Published : Feb 17 2025, 12:31 AM IST

ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿಯನ್ನು ರಚಿಸಲಾಗಿದೆ.

ಸಂಡೂರು: ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿಯನ್ನು ರಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿ ಹೇಳಿದರು.ಪಟ್ಟಣದ ಗುರುಭವನದಲ್ಲಿ ಶನಿವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸ್ವಯಂ ಸೇವಾ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ಲಿಂಗ ತಾರತಮ್ಯ ತಡೆ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಕುಂದುಕೊರತೆ ನಿವಾರಣೆಗೆ ಎಲ್ಲ ಶಾಲೆಗಳಲ್ಲಿ ಸಲಹಾ ಪೆಟ್ಟಿಗೆ ಅಳವಡಿಸಿ, ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ. ಶಾಲೆಗೆ ಗೈರಾಗುವ ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ. ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿ ಮಾಡಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಮಾತನಾಡಿ, ತಾಲೂಕಿನಲ್ಲಿ ಮಕ್ಕಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಕ್ಕಳನ್ನು ಬಾಲ್ಯವಿವಾಹ, ಭಿಕ್ಷಾಟನೆ, ಲೈಂಗಿಕ ಕಿರುಕುಳ ಹಾಗೂ ಇನ್ನಿತರೆ ಸಂಕಷ್ಟಗಳಿಗೆ ಒಳಗಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ಅಂತಹ ಸಮಸ್ಯೆಗಳು ಕಂಡು ಬಂದಲ್ಲಿ ಸಹಾಯವಾಣಿ ಸಂಖೆ 1098 ಅಥವ 112 ಗೆ ಕರೆ ಮಾಡಲು ತಿಳಿಸಿದರು.

ಮಕ್ಕಳ ಕಲ್ಯಾಣ ಸಮಿತಿ, ಬಳ್ಳಾರಿಯ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು ಬಾಲ್ಯ ವಿವಾಹಕ್ಕೆ ಕಾರಣಗಳು, ಅದರಿಂದಾಗುವ ದುಷ್ಪರಿಣಾಮಗಳು, ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಹಾಗೂ ಬಾಲನ್ಯಾಯ ಕಾಯ್ದೆ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಕಾರ್ಯಗಳ ಕುರಿತು ವಿವರಿಸಿದರು.

ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರರಾವ್ ಪೋಕ್ಸೋ ಕಾಯ್ದೆ, ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತು ಚನ್ನಬಸಪ್ಪ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯಗಳ ಕುರಿತು ವಿವರಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು. ರೀಡ್ಸ್ ಸಂಸ್ಥೆಯ ತಾಲೂಕು ಸಂಯೋಜಕ ಕೆ.ಎಂ. ತಿಪ್ಪೇಸ್ವಾಮಿ, ತಾಪಂ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಹೊನ್ನೂರಪ್ಪ, ಆನಂದ, ವಿದ್ಯಾರ್ಥಿನಿಲಯಗಳ ವಾರ್ಡನ್‌ಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.