ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿಗಳಿಂದ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿದರು.
ಸಂಡೂರು: ಪಟ್ಟಣದ ಎಸ್‌ಇಎಸ್ ಬಾಲಕಿಯರ ಪ್ರೌಢ ಶಾಲೆ ಹಾಗೂ ವ್ಯಾಲಿ ರೆಸಿಡೆನ್ಸಿಯಲ್ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಂದ ಶುಕ್ರವಾರ ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ತಡೆ ಕುರಿತು ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಎಸ್‌ಇಎಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಜಗದೀಶ್ ಬಸಾಪುರ್ ಜಾಥಾಕ್ಕೆ ಚಾಲನೆ ನೀಡಿ, ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿಗಳಿಂದ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿದರು. ಮಕ್ಕಳು ತಮ್ಮ ಹಕ್ಕುಗಳನ್ನು ಅನುಭವಿಸಲು ಅವಕಾಶ ಕಲ್ಪಿಸಬೇಕು. ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಜವಾಬ್ದಾರಿ ಎಲ್ಲರದ್ದಾಗಿದೆ ಎಂದರು.ಎಸ್‌ಇಎಸ್ ಬಾಲಕಿಯರ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಕಲ್ಲಯ್ಯಮಠ ಹಾಗೂ ಶಿಕ್ಷಕಿ ಜಿ. ಜಯಶ್ರೀ ಮಕ್ಕಳ ಹಕ್ಕುಗಳು ಹಾಗೂ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾನೂನುಗಳ ಕುರಿತು ವಿವರಿಸಿದರು.
ನಂತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿ, ಶಿಕ್ಷಣದ ಮಹತ್ವ, ಮಕ್ಕಳ ಹಕ್ಕುಗಳು ಹಾಗೂ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಗಳ ನಿಷೇಧ ಕಾಯ್ದೆಯ ಕುರಿತು ಜಾಗೃತಿ ಮೂಡಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಮನೋಹರ ಕಾರ್ಯಕ್ರಮ ನಿರೂಪಿಸಿದರು. ವ್ಯಾಲಿ ರೆಸಿಡೆನ್ಸಿಯಲ್ ಶಾಲೆಯ ಮುಖ್ಯ ಶಿಕ್ಷಕ ರಮೇಶ್, ಶಿಕ್ಷಕರಾದ ವನಸುಮಾ, ಅಂಬಿಕಾ, ವಾಣಿಶ್ರೀ, ಎಂ.ಷಣ್ಮುಖಪ್ಪ, ಹೇಮಲತಾ ಘೋರ್ಪಡೆ, ರಾಧಾ ಬಿ., ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪದ್ಧತಿ ತಡೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.