ಪ್ರಚಾರಕ್ಕೆ ಎಲೆಕ್ಟ್ರಿಕ್‌ ವಾಹನ ಬಳಸುವಂತೆ ಜಾಗೃತಿ ಜಾಥಾ

| Published : Mar 23 2024, 01:00 AM IST

ಸಾರಾಂಶ

ಹೆಚ್ಚುತ್ತಿರುವ ಮಾಲಿನ್ಯ ತಡೆಗೆ ಚುನಾವಣೆ ಸಂದರ್ಭದಲ್ಲಿ ಎಲೆಕ್ಟ್ರಿಕ್‌ ವಾಹನಗಳನ್ನು ಬಳಸುವಂತೆ ಪ್ರೇರೇಪಿಸಲು ಹಾಗೂ ಯುವ ಮತದಾರರು ಮತದಾನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಎಸ್‌ಮೊಬಿಲಿಟಿ ಸಂಸ್ಥೆಯಿಂದ ಶುಕ್ರವಾರ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹೆಚ್ಚುತ್ತಿರುವ ಮಾಲಿನ್ಯ ತಡೆಗೆ ಚುನಾವಣೆ ಸಂದರ್ಭದಲ್ಲಿ ಎಲೆಕ್ಟ್ರಿಕ್‌ ವಾಹನಗಳನ್ನು ಬಳಸುವಂತೆ ಪ್ರೇರೇಪಿಸಲು ಹಾಗೂ ಯುವ ಮತದಾರರು ಮತದಾನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಎಸ್‌ಮೊಬಿಲಿಟಿ ಸಂಸ್ಥೆಯಿಂದ ಶುಕ್ರವಾರ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.

ನಗರದ ಖಾಸಗಿ ಹೋಟೆಲ್‌ನಲ್ಲಿ ಇ-ಬೈಕ್‌ ಮತ್ತು ಇ-ಸ್ಕೂಟರ್‌ಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ನಗರದಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿದೆ, ಜಾಗತಿಕ ತಾಪಮಾನ ಏರಿಕೆ ತಡೆಗೆ ಎಲೆಕ್ಟ್ರಿಕ್‌ ವಾಹನಗಳ ಬಳಕೆಯ ಅಗತ್ಯತೆ ಬಗ್ಗೆ ಜಾಥಾದಲ್ಲಿ ವಿವರಿಸಲಾಯಿತು. ಜತೆಗೆ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತಯಾಚಿಸಲು ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಎಲೆಕ್ಟ್ರಿಕ್‌ ವಾಹನಗಳತ್ತ ಹೆಚ್ಚಿನ ಒಲವು ತೋರಬೇಕು ಎಂದು ಕೋರಲಾಯಿತು.

ಈ ವೇಳೆ ಮಾತನಾಡಿದ ಸಂಸ್ಥೆಯ ನಿರ್ದೇಶಕ ಜಿ.ರಂಗನಾಥ್, ಯುವಜನತೆಗೆ ಎಲೆಕ್ಟ್ರಿಕ್‌ ವಾಹನಗಳ ಬಳಕೆಯತ್ತ ಹೆಚ್ಚಿನ ಗಮನಹರಿಸಬೇಕು. ಅಲ್ಲದೆ, ಚುನಾವಣೆ ಸಂದರ್ಭದಲ್ಲಿ ಎಲೆಕ್ಟ್ರಿಕ್‌ ವಾಹನ ಬಳಕೆ ಕುರಿತಂತೆ ಅರಿವು ಮೂಡಿಸಲು ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಅಲ್ಲದೆ, ನಗರದ ಪ್ರಮುಖ ರಸ್ತೆಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳ ಮೂಲಕ ಜಾಗೃತಿ ಜಾಥಾ ನಡೆಸಲಾಗಿದೆ. ಯುವಕರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಹಾಗೂ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಿಸುವುದು ಇದರ ಗುರಿಯಾಗಿದೆ ಎಂದರು.