ಸಾರಾಂಶ
ಹಾವೇರಿ: ಸರ್ಕಾರದಿಂದ ಹೆಣ್ಣು ಮಕ್ಕಳಿಗೆ ದೊರೆಯುವ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪಾಲಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಾಲಮುಕುಂದ ರಮೇಶರಾವ ಮುತಾಲಿಕದೇಸಾಯಿ ಹೇಳಿದರು.ನಗರದ ಸ್ತ್ರೀ ಶಕ್ತಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಾವೇರಿ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಣ್ಣು ಮಕ್ಕಳಿಗೆ ಯಾವುದಾದರೂ ಸಮಸ್ಯೆ ಉಂಟಾದಲ್ಲಿ ಕಾನೂನು ನೆರವಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಬಹುದೆಂದು ಹೇಳಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನಿರೂಪಣಾಧಿಕಾರಿ ಶೈಲಾ ಕುರಹಟ್ಟಿ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ, ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ತಹಸೀಲ್ದಾರ್ ಶರಣಮ್ಮ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಐ.ಎ. ತಹಸೀಲ್ದಾರ ಇತರರು ಉಪಸ್ಥಿತರಿದ್ದರು.