ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಂಗವಾಗಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ನಡೆದ ಆರೋಗ್ಯಕರ ನಾಳೆಗಳಿಗಾಗಿ ಆಯುರ್ವೇದ ಎಂಬ ಘೋಷ ವಾಕ್ಯದೊಂದಿಗೆ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ
ಉಡುಪಿ: ಆಯುರ್ವೇದ ಕೇವಲ ಒಂದು ವೈದ್ಯಕೀಯ ಪದ್ಧತಿಯಲ್ಲ, ಅದು ಜೀವನ ಶೈಲಿ, ನಮ್ಮ ಬದುಕಿನ ಅವಿಭಾಜ್ಯ ಅಂಗ. ಆಯುರ್ವೇದ, ಯುನಾನಿ, ಹೋಮಿಯೋಪತಿ, ಯೋಗ ಮುಂತಾದ ಚಿಕಿತ್ಸಾ ಪದ್ಧತಿಗಳನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ನಾಳಿನ ಬದುಕು ಬಹಳ ಸುಂದರವಾಗಿರುತ್ತದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಅವರು ಜಿಲ್ಲಾಡಳಿತ ವತಿಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಂಗವಾಗಿ ನಗರದ ಬ್ರಹ್ಮಗಿರಿಯ ಬಾಲಭವನದಲ್ಲಿ ನಡೆದ ಆರೋಗ್ಯಕರ ನಾಳೆಗಳಿಗಾಗಿ ಆಯುರ್ವೇದ ಎಂಬ ಘೋಷ ವಾಕ್ಯದೊಂದಿಗೆ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಸಮಾಜದ ಎಲ್ಲಾ ವರ್ಗ ಸಮುದಾಯದ ಜನರು ಆಯುರ್ವೇದ ವೈದ್ಯ ಪದ್ಧತಿಯನ್ನು ಅನುಸರಿಸುತ್ತಿದ್ದಾರೆ. ಮುಖ್ಯವಾಗಿ ಚಿಕ್ಕಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ನುಂಗುವ ಬದಲು ಆಯುರ್ವೇದ ಪದ್ಧತಿಯನ್ನು ಅನುಸರಿಸಿದರೇ ರೋಗವನ್ನು ಬುಡಸಮೇತ ನಿರ್ಮೂಲನೆ ಮಾಡಬಹುದು ಎಂದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು ಮಾತನಾಡಿದರು, ಡಾ. ಶ್ರೀಧರ ಬಾಯರಿ ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಹಿರಿಯ ವೈದ್ಯರಾದ ಡಾ. ಮಹಮ್ಮದ್ ಇಕ್ಬಾಲ್, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಸಂಘದ ಅಧ್ಯಕ್ಷೆ ಡಾ. ಹೇಮಲತಾ ಉಪಸ್ಥಿತರಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಡಾ. ಸರ್ವೋತ್ತಮ ಶೆಟ್ಟಿ ನಿರೂಪಿಸಿ, ಡಾ. ಪ್ರದೀಪ್ ಆರ್ ಶೆಟ್ಟಿ ವಂದಿಸಿದರು.