ಆಯುರ್ವೇದ ಜೀವನದ ಪ್ರತಿಯೊಂದು ಹಂತದಲ್ಲಿಯೂ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಆಯುರ್ವೇದದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಆಯುರ್ವೇದ ಜೀವನದ ಪ್ರತಿಯೊಂದು ಹಂತದಲ್ಲಿಯೂ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಆಯುರ್ವೇದದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.ಅವರು ಬುಧವಾರ ನಗರದ ಕದ್ರಿ ಲಯನ್ಸ್ ಅಶೋಕ ಸೇವಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ಆಯುಷ್ ಸಂಘಟನೆಗಳು ಸಹಯೋಗದೊಂದಿಗೆ ನಡೆದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್ ಮಾತನಾಡಿ, ಸಾವಿರಾರು ವರ್ಷಗಳಿಂದಲೂ ದೇಶದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿ ರೂಢಿಯಲ್ಲಿದೆ. ಆಯುರ್ವೇದ ಪ್ರಕೃತಿ ಮತ್ತು ಮನುಷ್ಯನ ನಡುವಿನ ಅವಿನಾಭಾವ ಸಂಬಂಧವನ್ನು ಆಧರಿಸಿದ ಆರೋಗ್ಯ ಪದ್ಧತಿಯಾಗಿದೆ ಎಂದರು.ಡಾ.ಜಯಗೋವಿಂದ ಉಕ್ಕಿನಡ್ಕ ಹಾಗೂ ಶಾರದಾ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಂದೀಪ್ ಬೇಕಲ್ ಉಪನ್ಯಾಸ ನೀಡಿದರು.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಶಾಲೆಟ್ ಲವೀನಾ ಪಿಂಟೋ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಲೇಡಿಗೋಶನ್ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಮುರಳೀಧರ್ ಇದ್ದರು.