ಸಾರಾಂಶ
ಕಾರವಾರ: ದೇಶದಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಲ್ಲಿರುವ ಆಯುರ್ವೇದ ಚಿಕಿತ್ಸಾ ಪದ್ಧತಿಯು ವಿಶ್ವಾದ್ಯಂತ ಪ್ರಸಿದ್ಧಿ ಪಡೆದಿದೆ. ಆಯುರ್ವೇದ ಬಳಕೆಯಿಂದ ಹಲವು ರೋಗಗಳು ಬಾರದಂತೆ ತಡೆಯಲು ಸಾಧ್ಯವಿದ್ದು, ಆಯುರ್ವೇದವನ್ನು ಪ್ರತಿಯೊಬ್ಬರೂ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.ನಗರದ ಸರ್ಕಾರಿ ನೌಕರರ ಭವನದಲ್ಲಿ ಧನ್ವಂತರಿ ಜಯಂತಿ ಅಂಗವಾಗಿ ಮಂಗಳವಾರ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಯುರ್ವೇದವು ಯಾವುದೇ ರೋಗಗಳು ಬಾರದಂತೆ ತಡೆದು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿದ್ದು, ಈ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ. ಜಿಲ್ಲೆಯಲ್ಲಿ ಆಯುಷ್ ಇಲಾಖೆಯ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಕ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆಯುಷ್ ಇಲಾಖೆಯಲ್ಲಿನ ಯೋಗ ಶಿಕ್ಷಕರ ಮೂಲಕ ಜಿಲ್ಲೆಯ ಎಲ್ಲ ದೈಹಿಕ ಶಿಕ್ಷಣ ಶಿಕ್ಷಕರಿಗೆ ತರಬೇತಿ ಕೊಡಿಸಿ, ಆ ಮೂಲಕ ಶಾಲೆಯಲ್ಲಿ ಮಕ್ಕಳಿಗೆ ಯೋಗ ಕಲಿಸುವ ಮೂಲಕ, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.ನಗರಸಭೆ ಅಧ್ಯಕ್ಷ ರವಿರಾಜ ಆಂಕೋಲೇಕರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠ ಜಗದೀಶ್, ಜಿಪಂ ಮುಖ್ಯ ಲೆಕ್ಕಾಧಿಕಾರಿ ಆನಂದ್‌ಸಾ ಹಬೀಬ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅನ್ನಪೂರ್ಣ ವಸ್ತ್ರದ್, ತಾಲೂಕು ಆರೋಗ್ಯಾಧಿಕಾರಿ ಡಾ. ಸೂರಜಾ ನಾಯಕ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕವಿತಾ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಲಲಿತಾ ಶೆಟ್ಟಿ ಇದ್ದರು.ಚಿತ್ರಾಪುರದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಗು ದಿನಾಚರಣೆ
ಭಟ್ಕಳ: ಇಲ್ಲಿನ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆಯ ಆಶ್ರಯದಲ್ಲಿ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಹೆಣ್ಣುಮಗು ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಶ್ರೇಣಿಯ ಸಿವಿಲ್ ಜಡ್ಜ್ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಕಾಂತ ಕುರಣಿ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ ಕಾನೂನಿನಲ್ಲಿ ವಿಶೇಷ ಸೌಲಭ್ಯಗಳಿದ್ದು, ಇದರ ಸದುಪಯೋಗವನ್ನು ಪಡೆಯಬೇಕು. ಹೆಣ್ಣುಮಕ್ಕಳು ಕಾನೂನಿನ ತಿಳಿವಳಿಕೆ ಪಡೆಯಬೇಕಿದೆ. ಕಾನೂನಿನ ಬಗ್ಗೆ ತಿಳಿದುಕೊಂಡಿದ್ದರೆ ಅಗತ್ಯ ಸಂದರ್ಭದಲ್ಲಿ ಇದು ಉಪಯೋಗಕ್ಕೆ ಬರಲಿದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರಾಪುರ ಶ್ರೀವಲಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮಮತಾ ಭಟ್ಕಳ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎಂ.ಜೆ. ನಾಯ್ಕ ಮಾತನಾಡಿ, ವಿದ್ಯಾರ್ಥಿಗಳಿಗೆ ವಾಹನ ಕಾಯ್ದೆ ಹಾಗೂ ಕಾನೂನಿನ ಸಾಮಾನ್ಯ ಜ್ಞಾನದ ಕುರಿತು ಉಪಯುಕ್ತ ಮಾಹಿತಿ ನೀಡಿದರು.ಸಂಪನ್ಮೂಲ ವ್ಯಕ್ತಿ ಹಿರಿಯ ನ್ಯಾಯವಾದಿ, ನಾಗರಾಜ ಈ.ಎಚ್. ಮಾತನಾಡಿ, ಹೆಣ್ಣುಮಕ್ಕಳಿಗಾಗಿಯೇ ಇರುವ ಕಾನೂನಿನ ಕುರಿತು ಉಪನ್ಯಾಸ ನೀಡಿದರು. ಪ್ರಧಾನ ಸಿವಿಲ್ ಜಡ್ಜ್ ಹಾಗೂ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದೀಪಾ ಅರಳಗುಂಡಿ, ಹೆಚ್ಚುವರಿ ನ್ಯಾಯಾಧೀಶೆ ಧನವತಿ, ಸಹಾಯಕ ಸಹಕಾರಿ ಅಭಿಯೋಜಕ ಸೀತಾರಾಮ ಹರಿಕಾಂತ, ಶೇಖರ ಹರಿಕಾಂತ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ನಾಯ್ಕ, ಸಹ ಕಾರ್ಯದರ್ಶಿ ನಾಗರತ್ನಾ ನಾಯ್ಕ, ನ್ಯಾಯವಾದಿ ನಾಗರತ್ನಾ ಟಿ. ನಾಯ್ಕ ಇದ್ದರು. ಶಿಕ್ಷಕ ನಾರಾಯಣ ನಾಯ್ಕ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕಿ ರಮ್ಯಾ ವಂದಿಸಿದರು.