ಭಾರತದ ಪ್ರಾಚೀನ ವೈದ್ಯಕೀಯ ಪರಂಪರೆಯು ಅತ್ಯಂತ ಸಮೃದ್ಧವಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಷ್ಟೇ ಆಗಿರದೇ, ಆರೋಗ್ಯಕರ ಜೀವನಶೈಲಿಯಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ತಿಳಿಸಿದ್ದಾರೆ.

- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅಭಿಮತ । ದೊಡ್ಡಬಾತಿ ಗ್ರಾಮದ ತಪೋವನ ಆಯುರ್ವೇದ ಕಾಲೇಜು ಘಟಿಕೋತ್ಸವ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಭಾರತದ ಪ್ರಾಚೀನ ವೈದ್ಯಕೀಯ ಪರಂಪರೆಯು ಅತ್ಯಂತ ಸಮೃದ್ಧವಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಷ್ಟೇ ಆಗಿರದೇ, ಆರೋಗ್ಯಕರ ಜೀವನಶೈಲಿಯಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ತಿಳಿಸಿದರು.

ತಾಲೂಕಿನ ದೊಡ್ಡಬಾತಿ ಗ್ರಾಮದ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆ ಹಮ್ಮಿಕೊಂಡಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಆಯುರ್ವೇದ ಆರೋಗ್ಯಕರ ಜೀವನಶೈಲಿಯಾಗಿದೆ ಎಂದರು.

ಪ್ರಸ್ತುತ ದಿನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ, ಪರಿಸರದ ಸವಾಲುಗಳನ್ನು ಎದುರಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಆಯುರ್ವೇದ, ಯೋಗ, ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಆಧುನಿಕ ವಿಜ್ಞಾನ, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು, ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರಾದಾಯಿಕ ವೈದ್ಯಕೀಯ ಜ್ಞಾನಕ್ಕಷ್ಟೇ ಸೀಮಿತವಾಗದೇ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನೂ ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದು ತಿಳಿಸಿದರು.

ಕೃತಕ ಬುದ್ಧಿಮತ್ತೆಯು ರೋಗ ನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಹಾಗಾಗಿ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೇ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆ ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.

ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನಾಲ್ಕು ಮಾತುಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆಯನ್ನು ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಗುಜರಾತ್‌ನ ಜಾಮ್‌ ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್ ಸ್ಥಾಪಿಸುತ್ತಿದೆ ಎಂದು ವಿವರಿಸಿದರು.

ತಪೋವನ ಸಂಸ್ಥೆ ಅಧ್ಯಕ್ಷ ಡಾ.ಶಶಿಕುಮಾರ ವಿ. ಮೆಹರವಾಡೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ.ಶ್ರೀನಿವಾಸ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಎಸ್.ವಿ.ಹಲಸೆ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ.ಆರ್.ಅಶ್ವಿನಿ, ಡಾ.ಸುಮನ ಭಟ್ ಇತರರು ಇದ್ದರು.

- - -

-13ಕೆಡಿವಿಜಿ3, 4, 5: ದಾವಣಗೆರೆಯ ದೊಡ್ಡಬಾತಿ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವ ಸಮಾರಂಭವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಉದ್ಘಾಟಿಸಿದರು. -13ಕೆಡಿವಿಜಿ6: ದಾವಣಗೆರೆಯ ದೊಡ್ಡಬಾತಿ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. -13ಕೆಡಿವಿಜಿ7: ದಾವಣಗೆರೆಯ ದೊಡ್ಡಬಾತಿ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ಸಂಸ್ಥೆ ಅಧ್ಯಕ್ಷ ಡಾ.ಶಶಿವಕುಮಾರ ವಿ. ಮೆಹರವಾಡೆ ಸನ್ಮಾನಿಸಿದರು. -13ಕೆಡಿವಿಜಿ8: ದಾವಣಗೆರೆಯ ದೊಡ್ಡಬಾತಿ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜಿನ ಘಟಿಕೋತ್ಸವದಲ್ಲಿ ಆಯುರ್ವೇದ ವೈದ್ಯಕೀಯ ಪದವಿ ಪಡೆದ ವಿದ್ಯಾರ್ಥಿಗಳು.